ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಗೆ ಸಜ್ಜನ ಖಂಡನೆ

ಕಲಬುರಗಿ: ಆ.3:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಹಗುರವಾಗಿ ಹೇಳಿಕೆ ನೀಡಿದ ಆರಗ ಜ್ಞಾನೇಂದ್ರ ಅವರು ಕೂಡಲೇ ಬಂಧಿಸಬೇಕು ಎಂದು ಮಾದನ ಹಿಪ್ಪರಗಾ ಎಸ್ಸಿ ಎಸ್ಟಿ ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಅಮೃತ ಸಜ್ಜನ ಗೋಳಾ(ಬಿ) ಅವರು ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಕಸ್ತೂರಿ ರಂಗನ ವರದಿ ಜಾರಿ ಕುರಿತು ಈಶ್ವರ ಖಂಡ್ರೆ ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ಮಂಗಳವಾರ ತೀರ್ಥಹಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ವೇಳಗೆ ಆರಗ ಜ್ಞಾನೇಂದ್ರ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ ಅವರು ಹಗುರವಾದ ಹೇಳಿಕೆ ನೀಡುವ ಮೂಲಕ ದಲಿತರ ಬಗ್ಗೆ ಬಿಜೆಪಿ ಪಕ್ಷಕ್ಕೆ ಕಾಳಜಿ ಇಲ್ಲ ಎಂದು ತೋರಿಸಿಕೊಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.ಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ, ಪಾಶ್ಚಿಮತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ, ಆದರೆ ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತಿದೆ.ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಬೇಕು, ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆಯವರ ಹಾಗೂ ದಲಿತರ ಬಳಿ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.