ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ತೀವ್ರ ಶೋಧ

ಬೆಂಗಳೂರು, ನ.೨-ಕೆಜಿಹಳ್ಳಿ ಡಿಜೆಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿರುವ ಮಾಜಿ ಮೇಯರ್ ಸಂಪತ್‌ರಾಜ್ ಬಂಧನಕ್ಕೆ ಶೋಧ ನಡೆಸಿರುವ ಸಿಸಿಬಿ ಪೊಲೀಸರು, ಅವರ ಸ್ನೇಹಿತರು, ನೆಂಟರು ಹಾಗೂ ಹಿತೈಷಿಗಳಿಂದ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ.
ಸಂಪತ್‌ರಾಜ್ ಬಂಧನಕ್ಕಾಗಿ ಸಿಸಿಬಿ ಪೊಲೀಸರ ತಂಡ ಕೇರಳ ಸೇರಿ ಹೊರರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ. ಆದರೂ ಸಂಪತ್ ರಾಜ್ ಎಲ್ಲಿದ್ದಾರೆಂಬ ಬಗ್ಗೆ ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.
ಸಂಪತ್ ರಾಜ್ ಮನೆಗೆ ಬೀಗ ಹಾಕಿದ್ದು, ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿ ಬಂದಿದ್ದಾರೆ.
ಇದು ಮೂರನೇ ನೋಟಿಸ್ ಆಗಿದ್ದು, ಇದುವರೆಗೂ ವಿಚಾರಣೆಗೆ ಹಾಜರಾಗಿಲ್ಲ. ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಂಪತ್ ರಾಜ್ ಆರೋಪಿ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ
ಕೊರೊನಾ ಸೋಂಕು ತಗುಲಿದೆ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಪತ್ ರಾಜ್ ಏಕಾಏಕಿ ಡಿಸ್ಚಾರ್ಜ್ ಮಾಡಿಸಿಕೊಂಡು ರಾತ್ರೋರಾತ್ರಿ ಪರಾರಿಯಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೊಟೀಸ್ ನೀಡಿದ್ದಾರೆ.