ಮಾಜಿ ಸಂಸದ ಸಿದ್ನಾಳ್ ನಿಧನ

ಬೆಂಗಳೂರು, ಏ. ೨೭-ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಎಸ್.ಬಿ. ಸಿದ್ನಾಳ (೮೫) ಇಂದು ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಂಸದ ಎಸ್.ಬಿ. ಸಿದ್ನಾಳ ಅವರನ್ನು ಬೆಳಗಾವಿಯ ಕೆ.ಎಲ್.ಇ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸಂಪಗಾವದಲ್ಲಿ ೧೯೩೬ರ ಏಪ್ರಿಲ್ ೬ ರಂದು ಜನಿಸಿದ್ದ ಷಣ್ಮುಖಪ್ಪ ಬಸಪ್ಪ ಸಿದ್ನಾಳ್ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತ ೪ ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು.
ಅಂದಿನ ಪ್ರಧಾನಿಗಳಾದ ದಿ. ಇಂದಿರಾಗಾಂಧಿ, ರಾಜೀವ್‌ಗಾಂಧಿ ಹಾಗೂ ಕೇಂದ್ರದ ಮಾಜಿ ಸಚಿವ ಶಂಕರಾನಂದ ಅವರ ಜತೆಗೆ ನಿಕಟ ಬಾಂಧವ್ಯ ಹೊಂದಿದ್ದ ಎಸ್.ಬಿ. ಸಿದ್ನಾಳ ಅವರು ಕರ್ನಾಟಕ ಮತ್ತು ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದರು.
ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಇಂದು ಸಂಜೆ ಸಂಪಗಾವ ಬಳಿ ಇರುವ ಸಾನಿಕೊಪ್ಪ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಎಸ್.ಬಿ. ಸಿದ್ನಾಳ್ ಅವರ ಅಂತ್ಯಕ್ರಿಯೆ ನಡೆಯಲಿದೆ.
ಮುಖ್ಯಮಂತ್ರಿ ಶೋಕ
ಮಾಜಿ ಸಂಸದ ಎಸ್.ಬಿ. ಸಿದ್ನಾಳ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ನಾಯಕರುಗಳು ಶೋಕ ವ್ಯಕ್ತಪಡಿಸಿದ್ದಾರೆ.