
ಗೌರಿಬಿದನೂರು, ಮೇ.೭- ಕನ್ನಡ ಭಾಷೆಯ ಅಭಿವೃದ್ಧಿಯ ಹಿತದೃಷ್ಟಿಯಿಂದ ದೂರದೃಷ್ಟಿಯುಳ್ಳ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ದಿವಾನರಾಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ನವರ ಪರಿಶ್ರಮದಿಂದ ೧೯೧೫ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಲಾಯಿತು ಎಂದು ನಿವೃತ್ತ ಪ್ರಾಂಶುಪಾಲರಾದ ಕೆ.ಪಿ.ನಾರಾಯಣಪ್ಪ ತಿಳಿಸಿದರು.
ನಗರದ ಎಇಎಸ್ ನ್ಯಾಷನಲ್ ಕಾಲೇಜಿನಲ್ಲಿ ಶುಕ್ರವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ೧೦೯ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಕೇವಲ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆ ಮಾತ್ರವಲ್ಲದೆ ನೀರಾವರಿ, ಸಾರಿಗೆ, ಕೈಗಾರಿಕೆ ಹಾಗೂ ಇತರೆ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಆಧುನಿಕ ಮೈಸೂರಿನ ನಿರ್ಮಾತೃ ಎಂದು ಹೆಸರಾಗಿದ್ದಾರೆ. ಅವರ ಆದರ್ಶ ಗುಣಗಳನ್ನು ಇಂದಿನ ಯುವಜನತೆ ಮೈಗೂಡಿಸಿಕೊಂಡು ಸತ್ಪ್ರಜೆಗಳಾಗಿ ಬಾಳಬೇಕಾಗಿದೆ ಎಂದು ತಿಳಿಸಿದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಟಿ.ನಂಜುಂಡಪ್ಪ ಮಾತನಾಡಿ, ಕನ್ನಡ ಭಾಷೆ ಉಳಿಸಿ ಬೆಳೆಸುವುದರ ಜೊತೆಗೆ ಪುಸ್ತಕ ಪ್ರಕಟಣೆ, ಸಮ್ಮೇಳನಗಳನ್ನು ಆಯೋಜನೆ ಮಾಡುವ ಮೂಲಕ ಕನ್ನಡ ಸಾಹಿತ್ಯ ಮತ್ತು ಭಾಷೆಯನ್ನು ಶ್ರೀಮಂತಗೊಳಿಸುತ್ತಿರುವ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯನಿರ್ವಹಿಸುತ್ತಿದೆ. ಇದರೊಂದಿಗೆ ಕೆಲಸ ಮಾಡುತ್ತಾ ನೆಲ, ಜಲ, ಭಾಷೆಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.