ಮಾದರಿ ನೀತಿ ಸಂಹಿತೆ ಉಲ್ಲಂಘನೆ; 2 ಪ್ರಕರಣ ದಾಖಲು1443.74 ಲೀ ಮದ್ಯ, 23 ಲಕ್ಷ ರೂ. ನಗದು ಹಣ ವಶಕ್ಕೆ: ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ


ಬಳ್ಳಾರಿ,ಏ.16: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಿಲ್ಲೆಯ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಶನಿವಾರದಂದು 8,44,462 ರೂ. ಮೌಲ್ಯದ 1443.74 ಲೀಟರ್ ಮದ್ಯ ಮತ್ತು 23 ಲಕ್ಷ ರೂ. ನಗದು ಹಣ ವಶಪಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಾಖಲೆ ರಹಿತ 23 ಲಕ್ಷ ರೂ. ನಗದು ಹಣ ಸಾಗಿಸುತ್ತಿದ್ದ ವೇಳೆ ಎಫ್‍ಎಸ್‍ಟಿ ತಂಡವು ವಶಪಡಿಸಿಕೊಂಡಿದ್ದು, ವಿಚಾರಣೆಗಾಗಿ ಸಮಿತಿ ಮುಂದೆ ಹಾಜರುಪಡಿಸಲಾಗಿದೆ.  ಎಫ್‍ಎಸ್‍ಟಿ ತಂಡವು ವಸೂಲಿ ಮಾಡಿದ 23 ಲಕ್ಷ ರೂ.ಗಳನ್ನು ನ್ಯಾಯಾಲಯದ ನಿರ್ದೇಶನದಂತೆ ಚುನಾವಣಾ ಅಧಿಕಾರಿಗಳ ಸಮಕ್ಷಮದಲ್ಲಿ ಖಜಾನೆಯಲ್ಲಿ ಇರಿಸಲಾಗಿದೆ.
ಚುನಾವಣೆ ಪ್ರಕ್ರಿಯೆ ಮತ್ತು ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದರೂ, 92-ಸಿರುಗುಪ್ಪ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ರಾಜಕೀಯ ಪಕ್ಷವೊಂದು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರದ ಉದ್ದೇಶಕ್ಕಾಗಿ 5 ರಿಂದ 6 ಮಕ್ಕಳನ್ನು ಬಳಸಿಕೊಂಡಿರುವುದನ್ನು ಎಫ್‍ಎಸ್‍ಟಿ ತಂಡ ಪತ್ತೆಹಚ್ಚಿ, ವಿಡಿಯೋ ಕೂಡ ಮಾಡಿದೆ.  ಈ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಅವರು ತಿಳಿಸಿದ್ದಾರೆ.
91-ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪಕ್ಷದ ವಾಹನವೊಂದು ಕಂಪ್ಲಿಯ ಪೆಟ್ರೋಲ್ ಬಂಕ್‍ವೊಂದರಲ್ಲಿ ಟೋಕನ್ ನೀಡಿ ಇಂಧನ ತುಂಬಿಸಿಕೊಳ್ಳುತ್ತಿರುವುದನ್ನು ಎಫ್‍ಎಸ್‍ಟಿ ತಂಡವು ಚಿತ್ರೀಕರಿಸಿದೆ.  ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಅಬಕಾರಿ ಇಲಾಖೆಯಿಂದ 8,44,462 ರೂ. ಮೌಲ್ಯದ 1443.74 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ.
ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಒಟ್ಟು 43 ಫ್ಲೈಯಿಂಗ್ ಸ್ಕ್ವಾಡ್, 27 ಎಸ್‍ಎಸ್‍ಟಿ ತಂಡ ಹಾಗೂ 7 ಅಬಕಾರಿ ತಂಡಗಳು ಈಗಾಗಲೇ ಕಾರ್ಯಪ್ರವೃತ್ತವಾಗಿ ತಪಾಸಣೆ ನಡೆಸುತ್ತಿವೆ ಎಂದು ಅವರು ತಿಳಿಸಿದ್ದಾರೆ

One attachment • Scanned by Gmail