ಮಾರ್ಚ್ 6 ರಂದು ಎಸ್.ಯು.ಸಿ.ಐ(ಸಿ) ಯಿಂದ ವಿಧಾನ ಸೌಧ ಚಲೋ


ಸಂಜೆವಾಣಿ ವಾರ್ತೆ
ಬಳ್ಳಾರಿ, ಮಾ.03: ಜನ ಜೀವನದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಇದೇ ಮಾರ್ಚ್ 6ರಂದು ಬೃಹತ್ ಬೆಂಗಳೂರು ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ. ಈ ಸಭೆಯನ್ನು ಉದ್ದೇಶಿಸಿ ಪಕ್ಷದ ಕೇಂದ್ರ ಸಮಿತಿ ಸದಸ್ಯರು ಮತ್ತು ರಾಜ್ಯ ಕಾರ್ಯದರ್ಶಿಗಳಾದ ಕೆ.ಉಮಾ ಅವರು ಮಾತನಾಡಲಿದ್ದಾರೆ. ಪಕ್ಷದ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಈ ಹೋರಾಟಕ್ಕೆ ಬಳ್ಳಾರಿ ಭಾಗದಿಂದ ಸುಮಾರು 500 ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದ ತಯಾರಿಗಾಗಿ ಬಳ್ಳಾರಿಯ ಪಕ್ಷದ ಕಛೇರಿಯಲ್ಲಿ ಇಂದು ಕಾರ್ಯಕರ್ತರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶೀಗಳಾದ ರಾಧಾಕೃಷ್ಣ ಉಪಾಧ್ಯ ಅವರು ಪೋಸ್ಟರ್ ಕೂಡ ಬಿಡುಗಡೆ ಮಾಡಿದರು. ಜಿಲ್ಲಾ ಸಮಿತಿಯ ಸದಸ್ಯರಾದ ಮಂಜುಳಾ ಎಂ.ಎನ್, ಗೋವಿಂದ್, ಜಗದೀಶ್ ಉಪಸ್ಥಿತರಿದ್ದರು.