ಮಾಸ್ತಿ ಕನ್ನಡದ ಅಮೂಲ್ಯ ಆಸ್ತಿ : ಪಾಟೀಲ

ಕಲಬುರಗಿ,ಜೂ.6: ವಿಶ್ವದ ಪ್ರಮುಖ ಭಾಷೆಗಳಲ್ಲಿ ಸ್ಥಾನ ಪಡೆಯುವಲ್ಲಿ ಶ್ರಮಿಸಿದ, ಕನ್ನಡ ಭಾಷೆ ಸಾಹಿತ್ಯ, ಕಲೆ, ಸಂಸ್ಕøತಿಗೆ ತಮ್ಮದೇ ಆದ ಅಮೂಲ್ಯವಾದ ಕೊಡುಗೆಯನ್ನು ನೀಡಿ, ಕನ್ನಡ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಮಾಸ್ತಿ ವೆಂಕಟೇಶ ಅಯ್ಯಂಗಾರ ಅವರು ಕನ್ನಡದ ಅಮೂಲ್ಯವಾದ ಆಸ್ತಿಯಾಗಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಎಸ್.ಬಿ.ಕಾಲೇಜು ಎದುರುಗಡೆಯಿರುವ ‘ಕೊಹಿನೂರ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ‘ಮಾಸ್ತಿ ವೆಂಕಟೇಶ ಅಯ್ಯಂಗಾರ್’ರ ಜನ್ಮದಿನಾಚರಣೆ’ಯ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಮಾಸ್ತಿಯವರ ‘ಕೆಲವು ಸಣ್ಣ ಕಥೆಗಳು’ ಎಂಬ ಪ್ರಥಮ ಕೃತಿಯು 1920ರಲ್ಲಿ ಪ್ರಕಟವಾಯಿತು. ಇದು ಆಧುನಿಕ ಕನ್ನಡದ ಸಾಹಿತ್ಯದ ವಿಶಿಷ್ಟವಾದ ಮೊದಲ ಕೃತಿಯೆನಿಸಿದೆ. ಹಾಗೆ ನೋಡಿದರೆ ಸಣ್ಣಕಥೆಯನ್ನು ಮೊದಲು ಬರೆದವರು ಮಾಸ್ತಿಯವರಲ್ಲದೇ ಇದ್ದರೂ ಕೂಡಾ, ಕಥೆಗಳಿಗೆ ಮತ್ತು ಮಾಸ್ತಿಯವರಿಗೆ ಅನೋನ್ಯವಾದ ಬಾಂಧವ್ಯವಿದೆ. ಆದ್ದರಿಂದಲೇ ಇವರು ಕನ್ನಡ ಕಥಾ ಸಾಹಿತ್ಯದ ಪ್ರಮುಖರೆನಿಸಿಕೊಂಡು, ‘ಕನ್ನಡದ ಆಸ್ತಿ’ಯಾಗಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಮಾಸ್ತಿಯವರ ಸಣ್ಣ ಕಥೆಗಳ ಭಾಷೆ, ನಿರೂಪಣಾ ಶೈಲಿ, ಜೀವನದ ನಿಶ್ಚಳ ಅನುಭವಗಳು ತುಂಬಾ ಸರಳವಾಗಿದ್ದು, ಎಂತಹ ಓದುಗರನ್ನು ತನ್ನೊಳಗೆ ಆವರಿಸಿಕೊಳ್ಳುವಂತೆ ಮಾಸ್ತಿಯವರ ಸಾಹಿತ್ಯ ಹೊಂದಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಕಸಾಪ ಉತ್ತರ ವಲಯ ಗೌರವ ಅಧ್ಯಕ್ಷ ಶಿವಯೋಗಪ್ಪ ಬಿರಾದಾರ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭೀಮಾಶಂಕರ ಎಸ್.ಘತ್ತರಗಿ ಮಾತನಾಡಿ, ಕುವೆಂಪು ಅವರು ‘ಮಾಸ್ತಿಯವರ ಸಾಹಿತ್ಯ ದೊಡ್ಡದು. ಅವರು ಅದಕ್ಕಿಂತಲೂ ದೊಡ್ಡವರೆಂಬ ನನ್ನ ಭಾವನೆ’ ಎಂದಿರುವ ಮಾತು ಮಾಸ್ತಿಯವರ ಮೇರು ವ್ಯಕ್ತಿತ್ವವನ್ನು ತೋರಿಸುತ್ತದೆ. ಕನ್ನಡ ಸಾಹಿತ್ಯ, ಭಾಷೆಗೆ ಮಾಸ್ತಿ ವೆಂಕಟೇಶ ಅಯ್ಯಂಗಾರ ಅವರು ನೀಡಿರುವ ಕೊಡುಗೆ ಬಹು ಮೌಲ್ಯಯುತವಾಗಿದೆ. ಅವರೊಬ್ಬ ಕನ್ನಡ ಸಾರಸತ್ವ ಲೋಕದ ಮೇರು ಸಾಹಿತಿಯಾಗಿದ್ದಾರೆಂದು ನುಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪತ್ರಿಕಾ ಕಾರ್ಯದರ್ಶಿ ದೇವೇಂದ್ರಪ್ಪ ಗಣಮುಖಿ, ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ, ಉಪನ್ಯಾಸಕರಾದ ಅಶ್ವಿನಿ ಪಾಟೀಲ್, ಅರ್ಚನಾ ಎಂ.ಹೀರಾಪೂರ್, ಐಶ್ವರ್ಯ, ಸಾಹೇಬಗೌಡ್, ಆದಿತ್ಯ, ದೀಪಿಕಾ, ಅಚ್ಚುತ್, ನಾಗರಾಜ್, ವೈಷ್ಣವಿ, ಕಾಶಿ, ರಿತಿಕಾ, ಮಹಾಲಕ್ಷ್ಮೀ, ಅನುಷಾ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.