ಮಾ.೧ರಿಂದ ಸರ್ಕಾರಿ ನೌಕರರ ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ

ರಾಯಚೂರು,ಫೆ.೨೩- ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯೋಜನೆಯನ್ನು ಜಾರಿಗೊಳಿಸಲು ಆಗ್ರಹಿಸಿ ಮಾ. ೩ ರಿಂದ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಮಹಾಂತೇಶ ಬಿರಾದಾರ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಫೆ. ೨೧ ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ತಾಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು- ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲು ೮೦೦೦ ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದರು.
೨೦೨೩-೨೪ನೇ ಬಜೆಟ್‌ನಲ್ಲಿ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ನಿರಾಶೆ ಮೂಡಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ರಾವ್ ಅವರ ಅಧ್ಯಕ್ಷತೆಯಲ್ಲಿ ೭ನೇ ವೇತನ ಆಯೋಗವನ್ನು ರಚಿಸಿದ್ದು, ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತ್ರತ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿತ್ತು.
ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯ ಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿ, ನಿರ್ಲಕ್ಷ್ಯ ವಹಿಸುತ್ತಿದೆ.ಆದ್ದರಿಂದ ಮಾರ್ಚ್ ೧ ರಂದು ನಡೆಯುವ ಅನಿರ್ಧಿಷ್ಟವಧಿ ಮುಷ್ಕರಕ್ಕೆ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಭೀಮಣ್ಣ ನಾಯಕ,ಶಂಕರಗೌಡ ಪಾಟೀಲ, ಅಂಜಿನೇಯ್ಯ,ಯಂಕಪ್ಪ, ಹನುಮಂತಪ್ಪ,ಸುರೇಶ,ಸಂಗಮೇಶ ಸೇರಿದಂತೆ ಇತರರು ಉಪಸ್ಥಿತರಿದ್ದರು.