ಮಾ.೧೦ರೊಳಗಾಗಿ ಪೂರ್ಣಪ್ರಮಾಣದಲ್ಲಿ ಅನುದಾನವನ್ನು ಬಳಕೆ ಮಾಡಿಕೊಳ್ಳಿ

ರಾಯಚೂರು,ಮಾ.೦೩- ಮಾ. ಆರ್ಥಿಕ ವರ್ಷ ಪೂರ್ಣಗೊಳ್ಳುವ ಮುನ್ನ ಅಂದರೆ ಮಾರ್ಚ್ ೧೦ರೊಳಗಾಗಿ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಖರ್ಚು ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು.
ಅವರು ಮಾ.೦೨ರ(ಗುರುವಾರ) ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಜಲನಿರ್ಮಲ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ೨೦೨೨-೨೩ನೇ ಸಾಲಿನ ಜಿಲ್ಲಾ ಪಂಚಾಯತ್ ಜಿಲ್ಲಾ ವಲಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಲಭ್ಯಮವಿರುವ ಅನುದಾನ ಬಳಕೆಯಾಗದೇ ಹೋದಲ್ಲಿ ಅಂತಹ ಇಲಾಖೆಗಳಿಗೆ ಮುಂದಿನ ಬಾರಿ ಅನುದಾನ ಕಡಿತವಾಗುವ ಸಾಧ್ಯತೆ ಇದೆ. ಅಂತಹ ಇಲಾಖೆಗಳು ಲಭ್ಯವಿರುವ ಅನುದಾನವನ್ನು ಬಳಕೆ ಮಾಡಿಕೊಳ್ಳುವಲ್ಲಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಇಲಾಖೆಗಳಲ್ಲಿರುವ ಅನುದಾನಗಳನ್ನು ಮಾರ್ಚ್ ೧೦ರೊಳಗಾಗಿ ಖರ್ಚು ಮಾಡಬೇಕು. ಬಾಕಿ ಉಳಿದ ಸಿಬಂದಿಗಳ ವೇತನ, ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಬೇಕು. ರಾಷ್ಟ್ರೀಯ ಕಾರ್ಯಕ್ರಮದಡಿ ಪ್ರಾಥಮಿಕ ಶಿಕ್ಷಣಕ್ಕೆ ಆಹಾರ ಬೆಂಬಲ, ಮದ್ಯಾಹ್ನದ ಬಿಸಿಯೂಟ ಯೋಜನೆ, ಶಾಲಾ ಮಾತೆಯರ ವೇತನ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗೆ ಬಾಕಿ ಉಳಿದ ಪಾವತಿಗಳನ್ನು ಕೂಡಲೇ ಪಾವತಿ ಪ್ರಕ್ರಿಯೆ ಪೂಣಗೊಳಿಸಬೇಕು ಎಂದರು.
ಶಿಕ್ಷಣ ಇಲಾಖೆಯಲ್ಲಿ ಶೇ.೮೪.೮೮ ರಷ್ಟು ಅನುದಾನ ಬಳಕೆಯಾಗಿದ್ದು, ಆರೋಗ್ಯ ಇಲಾಖೆಯಲ್ಲಿ ಶೇ.೯೪.೪೫ ರಷ್ಟು ಬಳಕೆಯಾಗಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಶೇ.೮೧.೭೮ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಅನುದಾನವನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ಉಳಿದ ಅನುದಾನವನ್ನು ಮಾರ್ಚ್ ೧೦ರೊಳಗಾಗಿ ಬಳಕೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ನಾಗರಾಜ, ಮುಖ್ಯ ಯೋಜನಾ ಅಧಿಕಾರಿ ಗುರುನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರಬಾಬು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವೃಷಬೇಂದ್ರಯ್ಯ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮಹೇಶ ಪೋತೆದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರಾಜೇಂದ್ರ ಜಲ್ದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.