ಮಾ.೨೪: ಗಬ್ಬೂರಿಗೆ ಗೃಹ ಸಚಿವ ಅಮಿತ್‌ಶಾ ,ಸಿಎಂ ಆಗಮನ

ವಿವಿಧ ಕಾಮಗಾರಿಗಳಿಗೆ ಚಾಲನೆ
ರಾಯಚೂರು, ಮಾ.೧೬- ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ೪ ಸಾವಿರ ಒಂದು ನೂರು ಕೋಟಿ ವೆಚ್ಚದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಅಡಿಗಲ್ಲು ಕಾರ್ಯಕ್ರಮವನ್ನು ಮಾರ್ಚ್ ೨೪ ರಂದು ಗಬ್ಬೂರಿನ ಸಿರವಾರ ಕ್ರಾಸ್‌ನಲ್ಲಿ ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ ಕೇಂದ್ರ ಹಾಗೂ ರಾಜ್ಯ ಸಚಿವರು, ಸಂಸದರು,ಶಾಸಕರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.
ಇಂಜಿನಿಯರ್ ಕಾಲೇಜು,೨೯ ಕರೆಗಳು ಕೆರೆ ತುಂಬಿಸುವ ಯೋಜನೆ, ಏತ ನೀರಾವರಿ ಯೋಜನೆಗೆ ಚಾಲನೆ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಉದ್ಘಾಟನೆಯನ್ನು ಮಾಡಲಿದ್ದಾರೆ ಎಂದ ಅವರು, ಈ ಕಾರ್ಯಕ್ರಮಕ್ಕೆ ೩ ಲಕ್ಷ ಜನರು ಬರುವ ನಿರೀಕ್ಷೆ ಇದೆ.ರಾಯಚೂರುನಲ್ಲಿಯೇ ಏಮ್ಸ್ ಸ್ಥಾಪನೆ ಮಾಡಬೇಕು ಎಂದು ಪ್ರದಾನ ಮಂತ್ರಿಗಳಿಗೆ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಾಕಷ್ಟು ಬಾರಿ ಮನವಿಯನ್ನು ಮಾಡಿಕೊಳ್ಳಲಾಗಿದೆ.ರಾಜ್ಯಕ್ಕೆ ಏಮ್ಸ್ ಬಂದರೆ ಅದು ರಾಯಚೂರುನಲ್ಲೆಯೇ ಸ್ಥಾಪನೆಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್, ಕೊಟ್ರೇಶಪ್ಪ ಕೋರಿ, ಕಡಗೋಲ ರಾಮಚಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.