ಮಾ.11 ರಂದು ಜಿಲ್ಲಾ ಮಟ್ಟದ ಎಸ್ಟಿ ಸಮಾವೇಶ


ಬ್ಯಾಡಗಿ,ಮಾ.9:ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಇದೇ ಮಾರ್ಚ್ 11ರಂದು ಜಿಲ್ಲಾ ಹಾಗೂ ತಾಲೂಕು ಮಟ್ಟದ ಬಿಜೆಪಿ ಎಸ್ಟಿ ಮೋರ್ಚಾದ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಎಸ್ಟಿ ಸಮಾವೇಶವು ನಡೆಯಲಿದೆ ಎಂದು ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಹೇಳಿದರು.
ಸ್ಥಳೀಯ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ಸಿ, ಎಸ್ಟಿ ಮೀಸಲಾತಿಯ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಹೇಳುತ್ತಿರುವ ಕಾಂಗ್ರೆಸಿಗರಿಗೆ ತಿರುಗೇಟು ಎಂಬಂತೆ ಮೀಸಲಾತಿ ಹೆಚ್ಚಿಸುವ ಮೂಲಕ ಎಸ್ಸಿ ಎಸ್ಟಿ ಸಮುದಾಯಗಳಿಗೆ ಬಿಜೆಪಿ ಸರ್ಕಾರ ಸದಾ ನಿಮ್ಮೊಂದಿಗೆ ಇದೆ ಎಂಬುದನ್ನು ತೋರಿಸಿ ಕೊಟ್ಟಿದೆ ಎಂದರಲ್ಲದೇ, ಮಾರ್ಚ್ 11ರಂದು ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ಉಸ್ತುವಾರಿ ನಾಯಕರಾದ ಅರುಣಸಿಂಗ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸುರಪುರ ಶಾಸಕ ರಾಜೂಗೌಡ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ, ಜಿಲ್ಲೆಯ ಎಲ್ಲ ಶಾಸಕರು, ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸುವರು ಎಂದು ತಿಳಿಸಿದರು.
ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ಶಿವಾನಂದ ಯಮುನಕ್ಕನವರ ಮಾತನಾಡಿ ಬ್ಯಾಡಗಿಯಲ್ಲಿ ನಡೆಯುವ ಈ ಸಮಾವೇಶದಲ್ಲಿ ಸಮಾಜದ ಹೆಮ್ಮೆಯ ನಾಯಕ ಸಚಿವ ಶ್ರೀರಾಮುಲು ಅವರು ಸಹ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಹಾವೇರಿ ಜಿಲ್ಲೆಯ ಸುಮಾರು 12ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕಾ ಬಿಜೆಪಿ ಅಧ್ಯಕ್ಷ ಹಾಲೇಶ ಜಾಧವ್, ತಾಲೂಕಾ ಎಸ್ಟಿ ಮೋರ್ಚಾ ಅಧ್ಯಕ್ಷ ಮಾರುತಿ ಫಾಸಿ, ಜಿಲ್ಲಾ ಎಸ್ಟಿ ಮೋರ್ಚಾ ಉಪಾಧ್ಯಕ್ಷ ಪ್ರಕಾಶ ಕಳ್ಳಿಮನಿ, ಮುಖಂಡರಾದ ವೀರೇಂದ್ರ ಶೆಟ್ಟರ, ಬಸವಾನಾಯ್ಕ್, ಸುರೇಶ ಉದ್ಯೋಗಣ್ಣನವರ, ಶಿವಾನಂದ ಕಡಗಿ, ಸುರೇಶ ಕಳ್ಳಿಮನಿ, ಬಸವರಾಜ ಹಲಗೇರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.