
ವಿಜಯಪುರ:ಮಾ.19: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಇದೇ ಮಾ.21 ರಂದು ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮುಖ್ಯಮಂತ್ರಿಗಳು ಮಾರ್ಚ್.21 ರಂದು ಜಿಲ್ಲೆಗೆ ಆಗಮಿಸಿ, ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿರುವ ಹಿನ್ನಲೆಯಲ್ಲಿ ಈ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಗ್ರಾಮದಲ್ಲಿ ಜರುಗುವ ಸಾರ್ವಜನಿಕ ಕಾರ್ಯಕ್ರಮದ ವೇದಿಕೆ ನಿರ್ಮಾಣ, ಸಾರ್ವಜನಿಕರಿಗೆ ಆಸನ ವ್ಯವಸ್ಥೆ, ಉಪಹಾರ ಮಧ್ಯಾಹ್ನ ಊಟ, ಕುಡಿಯುವ ನೀರು, ವಿದ್ಯುತ್ ಸಮಸ್ಯೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುಂತೆ ಸೂಚಿಸಿದರು.
ಮುಖ್ಯಮಂತ್ರಿಗಳು ಉದ್ಘಾಟಿಸಲಿರುವ, ಭೂಮಿಪೂಜೆ, ಶಂಕುಸ್ಥಾಪನೆ ನೆರವೇರಿಸಲಿರುವ ಕಾಮಗಾರಿಗಳನ್ನು ಇಲಾಖಾವಾರು ಕಾಮಗಾರಿ ಪಟ್ಟಿ ಸಿದ್ಧಪಡಿಸಿಟ್ಟುಕೊಳ್ಳಬೇಕು. ಒಂದೇ ವೇದಿಕೆಯಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳ, ಭೂಮಿಪೂಜೆ, ಶಂಕುಸ್ಥಾಪನೆ ನೆರವೇರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಮುಖ್ಯ ವೇದಿಕೆಯ 6 ಎಕರೆ ಸ್ಥಳವಿರುವ ಶಾಲಾ ಆವರಣದಲ್ಲಿ ಪೆಂಡಾಲ, ಆಸನ ಹಾಗೂ ಬೆಳಕಿನ ವ್ಯವಸ್ಥೆಯನ್ನು ವ್ಯವಸ್ಥಿತವಾಗಿರುವಂತೆ ನೋಡಿಕೊಳ್ಳಬೇಕು. ವೇದಿಕೆ ಮೇಲೆ ಶಿಷ್ಟಾಚಾರ ಪಾಲನೆಯಾಗುವಂತೆ ತಹಶೀಲ್ದಾರ ಹಾಗೂ ಉಪ ವಿಭಾಗಾಧಿಕಾರಿಗಳು ನೋಡಿಕೊಳ್ಳಬೇಕು. ಮುಖ್ಯಮಂತ್ರಿಗಳಿಗೆ ವಿಶ್ರಾಂತಿಗಾಗಿ ಪ್ರತ್ಯೇಕವಾಗಿ ಗ್ರೀನ್ ಹೌಸ್, ಹೆಲಿಪ್ಯಾಡ್ ನಿರ್ಮಾಣ, ಊಟದ ವ್ಯವಸ್ಥೆ, ಅಂಬ್ಯೂಲೆನ್ಸ್, ಅಗ್ನಿಶಾಮಕ ವಾಹನ, ಸಾರ್ವಜನಿಕ ಬಂದೋಬಸ್ತ ಮಾಡುವುದು, ಪತ್ರಕರ್ತರ ಗ್ಯಾಲರಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟ ಇಲಾಖಾಧಿಕಾರಿಗಳು ತಮ್ಮ ತಮ್ಮ ಇಲಾಖೆ, ಕಾಮಗಾರಿಗಳ ಮಾಹಿತಿ ಒದಗಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಸೇರಿದಂತೆ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು, ವಿವಿಧ ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.