
ಬೆಂಗಳೂರು,ನ.೯- ಮಹತ್ವದ ಬೆಳವಣಿಗೆಯೊಂದರಲ್ಲಿ ನೆನಗುದಿಗೆ ಬಿದ್ದಿರುವ ರಾಜ್ಯದ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರಗಳ ಪುನರ್‌ವಿಂಗಡಣೆ, ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಸಲು ಹೈಕೋರ್ಟ್ ಅಂತಿಮ ಗಡುವು ನೀಡಿದೆ.
ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ’ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ,ಕ್ಷೇತ್ರಗಳ ಪುನರ್‌ವಿಂಗಡಣೆ, ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಸಲು ಹೈಕೋರ್ಟ್ ಅಂತಿಮ ಗಡುವು ವಿಧಿಸಿ ಆದೇಶ ನೀಡಿದೆ.
ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ ೧೯ಕ್ಕೆ ಮುಂದೂಡಿತು. ಅಲ್ಲದೆ, ಮುಂದಿನ ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಲು ಕೊನೆಯ ಬಾರಿಗೆ ರಾಜ್ಯ ಸರ್ಕಾರಕ್ಕೆ ಕಾಲಾವಕಾಶ ನೀಡುತ್ತಿರುವುದಾಗಿ ಪೀಠ ತಿಳಿಸಿದೆ.
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕ್ಷೇತ್ರಗಳ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಹೀಗಾಗಿ, ಕಾಲಾವಕಾಶ ನೀಡಬೇಕು ಎಂದು ಕೋರಿದರು. ಜೊತೆಗೆ, ನಾವು ತಕ್ಷಣ ಚುನಾವಣೆ ನಡೆಸಲು ಪ್ರಯತ್ನಿಸುತ್ತೇವೆ ಎಂದು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಶಾಸನಬದ್ಧ ಸಂಸ್ಥೆಗಳಲ್ಲಿ ಚುನಾವಣಾ ನಡೆಸದೇ ಬಿಡಲಾಗದು. ಈ ಕುರಿತು ಸುಪ್ರೀಂ ಕೋರ್ಟ್ ಸಹ ರಾಜ್ಯ ಸರ್ಕಾರಕ್ಕೆ ಎರಡು ಬಾರಿ ಎಚ್ಚರಿಕೆ ನೀಡಿದೆ. ಪ್ರಯತ್ನಿಸುತ್ತೇವೆ ಎನ್ನಲಾಗದು. ಚುನಾವಣೆ ನಡೆಸಬೇಕು ಎಂದು ನಿರ್ದೇಶನ ನೀಡಿತು. ಅಲ್ಲದೆ, ಇದು ಕೊನೆಯ ಬಾರಿಗೆ ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಲಾಗುತ್ತಿದೆ ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ಇದೇ ಪ್ರಕರಣ ಸಂಬಂಧ, ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರಗಳ ಪುನರ್‌ವಿಂಗಡಣೆ ಮತ್ತು ಹಿಂದುಳಿದ ವರ್ಗಗಳೂ ಸೇರಿದಂತೆ ಇತರೆ ಸಮುದಾಯಗಳಿಗೆ ಕಾಲಮಿತಿಯಲ್ಲಿ ಮೀಸಲಾತಿ ನಿಗದಿಪಡಿಸಲು ವಿಫಲವಾಗಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ?೫ ಲಕ್ಷ ದಂಡ ವಿಧಿಸಿತ್ತು. ೨೦೨೨ರ ಜನವರಿ ೨೮ರ ಒಳಗೆ ಐದು ಲಕ್ಷ ರೂಪಾಯಿ ದಂಡದ ಮೊತ್ತವನ್ನು ಪಾವತಿಸುವುದನ್ನು ಆಧರಿಸಿ ರಾಜ್ಯ ಸರ್ಕಾರದ ಕಾಲಾವಕಾಶ ವಿಸ್ತರಣೆ ಮನವಿಯನ್ನು ಪರಿಗಣಿಸಲಾಗಿದೆ. ಈ ಪೈಕಿ ತಲಾ ಎರಡು ಲಕ್ಷ ರೂಪಾಯಿಗಳನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರು ವಕೀಲರ ಸಂಘ ಹಾಗೂ ಒಂದು ಲಕ್ಷ ರೂಗಳನ್ನು ವಕೀಲರ ಗುಮಾಸ್ತರ ಕಲ್ಯಾಣ ನಿಧಿಯಲ್ಲಿ ಠೇವಣಿ ಇಡಬೇಕು ಎಂದು ಆದೇಶಿಸಿತ್ತು.
ಇದಕ್ಕೂ ಮುನ್ನ, ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ೨೦೨೨ರ ಫೆಬ್ರವರಿ ೧ರ ಒಳಗೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಹಿಂದುಳಿದ ವರ್ಗಕ್ಕೆ ರಾಜಕೀಯ ಮೀಸಲಾತಿ ನಿಗದಿ ಪೂರ್ಣಗೊಳಿಸುವಂತೆ ನ್ಯಾಯಾಲಯ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಥಿತಿಗತಿ ವರದಿ ಸಲ್ಲಿಸಿದೆ. ನಾವು ಕ್ಷೇತ್ರ ಪುನರ್ವಿಂಗಡಣೆ ಪೂರ್ಣಗೊಳಿಸಿದ್ದೇವೆ. ೨೦೨೩ ಜನವರಿ ೩೦ರಂದು ಸೀಮಾ ನಿರ್ಣಯ ಆಯೋಗವು ಕ್ಷೇತ್ರ ಪುನರ್‌ವಿಂಗಡಣಾ ಅಧಿಸೂಚನೆ ಪ್ರಕಟಿಸಿದ್ದು, ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದರು.
ಕಳೆದ ಜೂನ್ ೨೯ ರಂದು ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಹತ್ತು ವಾರಗಳಲ್ಲಿ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿತ್ತು.
ಈ ಕುರಿತ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ‘ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಮಾಡಲಾಗಿತ್ತು. ಆದರೆ, ಕೆಲವು ಆಕ್ಷೇಪಣೆಗಳು ಬಂದಿರುವ ಹಿನ್ನೆಲೆಯಲ್ಲಿ ರೀ-ಡೂ ಮಾಡಬೇಕಾಗಿದೆ. ನಂತರ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಬೇಕಾಗುತ್ತದೆ. ಈ ಪ್ರಕ್ರಿಯೆ ಪೂರ್ಣಗೊಳಿಸಲು ಹತ್ತು ವಾರಗಳ ಕಾಲಾವಕಾಶ ಬೇಕು’ ಎಂದು ಕೋರಿದರು.
ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠವು, ‘ಪ್ರಕ್ರಿಯೆಯನ್ನು ೧೦ ವಾರಗಳಲ್ಲಿ ಪೂರ್ಣಗೊಳಿಸಿ, ಅಧಿಸೂಚನೆ ಹೊರಡಿಸಬೇಕು. ನಂತರ ರಾಜ್ಯ ಚುನಾವಣಾ ಆಯೋಗ ಮುಂದಿನ ಪ್ರಕ್ರಿಯೆ ಕೈಗೊಳ್ಳಬೇಕು’ ಎಂದು ನಿರ್ದೇಶಿಸಿತು.
ಆದೇಶದ ಅನುಪಾಲನಾ ವರದಿಯನ್ನು ಮುಂದಿನ ವಿಚಾರಣೆ ವೇಳೆಗೆ ಕೋರ್ಟ್‌ಗೆ ಸಲ್ಲಿಸುವಂತೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮೂರು ತಿಂಗಳ ಕಾಲ ಮುಂದೂಡಿತ್ತು.ಈಗ ಮತ್ತೆ ವಿಭಾಗೀಯ ಪೀಠವು ಪುನರ್‌ವಿಂಗಡಣೆ, ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಸಲು ಅಂತಿಮ ಗಡುವು ನೀಡಿದೆ.