
ಹುಬ್ಬಳ್ಳಿ, ಮಾ. ೬: ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ಕುರಿತಂತೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಮಾಜಕ್ಕೆ ಒಳ್ಳೆಯ ದಿನಗಳು ಬರಲಿವೆ ಎಂದು ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.
ನಗರದಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಭೇಟಿಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮೀಸಲಾತಿ ವಿಷಯದಲ್ಲಿ ಸ್ವಾಮೀಜಿಗಳಲ್ಲಿ ಭಿನ್ನಾಭಿಪ್ರಾಯವಿಲ್ಲ, ನಮಗೆ ಸಾಮಾಜಿಕ ನ್ಯಾಯ ಸಿಗಬೇಕು ಎನ್ನುವುದು ನಮ್ಮ ಉದ್ದೇಶ ಎಂದ ಅವರು ಈ ಕುರಿತಂತೆ ಸಂವಿಧಾನಾತ್ಮಕ ಹಾಗೂ ಕಾನೂನಾತ್ಮಕ ತೊಡಕುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ. ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದರು.
ಮಠಾಧೀಶರನ್ನು ಚುನಾವಣಾ ಅಖಾಡಕ್ಕಿಳಿಸುವ ವಿಷಯ ಕುರಿತಾದ ಸುದ್ದಿಗಾರರ ಪ್ರಶ್ನೆಗೆ ‘ನೋ ಕಾಮೆಂಟ್ಸ್’ ಎಂದಷ್ಟೇ ಅವರು ಉತ್ತರಿಸಿದರು.