ಮುಂಗಾರು ಪ್ರಬಲ: ದಕ್ಷಿಣ ಭಾರತದಲ್ಲಿ ಮಳೆ

ನವದೆಹಲಿ,ಜೂ.೯-ಮುಂಗಾರು ಮಳೆ ಈಗಾಗಲೇ ಪ್ರಬಲವಾಗಿದ್ದು, ಕರ್ನಾಟಕ ಸೇರಿದಂತೆ ಭಾರತದ ದಕ್ಷಿಣ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಬಯಲು ಸೀಮೆಯಲ್ಲಿ ಬಿಸಿಲಿನ ತಾಪ ಮುಂದುವರಿದಿದ್ದರೂ ಆಗಾಗ ಸುರಿಯುತ್ತಿರುವ ತುಂತುರು ಮಳೆಯಿಂದಾಗಿ ಬಿಸಿಲಿನ ತಾಪದಿಂದ ಜನತೆ ಮುಕ್ತಿ ಪಡೆಯುತ್ತಿದ್ದಾರೆ .
ಕರ್ನಾಟಕದ ಮಂಗಳೂರು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಗದಗ, ಧಾರವಾಡ, ಹಾವೇರಿ, ವಿಜಾಪುರ, ಬಾಗಲಕೋಟೆ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡುಗು ಕೆಲವೆಡೆ ಭಾರೀ ಮಳೆಯಾಗಲಿದೆ. ಇಂದಿನಿಂದ ೧೧ರವರೆಗೆ ೪೦-೫೦ ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮೂಲಕ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ನೈರುತ್ಯ ಮುಂಗಾರು ಮಹಾರಾಷ್ಟ್ರಕ್ಕೂ ಆಗಮಿಸಿರುವುದರಿಂದ ಗೋವಾ, ಕರ್ನಾಟಕ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ನಾಳೆಯವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇಂದು ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ನಿರೀಕ್ಷೆಯಿದೆ.
ಸ್ಕೈಮೆಟ್ ಹವಾಮಾನ ವರದಿಯ ಪ್ರಕಾರ, ಮುಂದಿನ ೨೪ ಗಂಟೆಗಳಲ್ಲಿ ಕರಾವಳಿ ಕರ್ನಾಟಕ, ದಕ್ಷಿಣ ಮಧ್ಯ ಮಹಾರಾಷ್ಟ್ರ ಮತ್ತು ದಕ್ಷಿಣ ಕೊಂಕಣ ಮತ್ತು ಗೋವಾದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಲಕ್ಷದ್ವೀಪ, ಮರಾಠವಾಡ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸಿಕ್ಕಿಂ, ಈಶಾನ್ಯ ಭಾರತ, ದಕ್ಷಿಣ ಒಳ ಕರ್ನಾಟಕ, ಉತ್ತರ ಒಳ ಕರ್ನಾಟಕ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಮೋಡ ಕವಿದ ವಾತಾವರಣವಿದ್ದು, ಸಂಜೆಯ ನಂತರ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಒಡಿಶಾ, ದಕ್ಷಿಣ ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ ಮತ್ತು ಪಶ್ಚಿಮ ಹಿಮಾಲಯದ ಕೆಲವು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ರಾಜಸ್ಥಾನ, ಪೂರ್ವ ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಧೂಳಿನ ಚಂಡಮಾರುತದೊಂದಿಗೆ ಗುಡುಗು ಸಹಿತ ಮಳೆಯಾಗಬಹುದು.
ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧೂಳಿನ ಚಂಡಮಾರುತದೊಂದಿಗೆ ಲಘು ಮಳೆಯಾಗುವ ಸಾಧ್ಯತೆಯಿದೆ. ಈಶಾನ್ಯ ಮಧ್ಯಪ್ರದೇಶ, ಜಾರ್ಖಂಡ್, ಪಂಜಾಬ್, ಹರಿಯಾಣ, ಬಿಹಾರ ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ಬಿಸಿಗಾಳಿ ಪರಿಸ್ಥಿತಿಗಳು ಉಂಟಾಗಬಹುದು.
ಮುಂಗಾರು ಮಳೆ ಈಗಾಗಲೇ ಜೋರಾಗಿದ್ದು, ಕರ್ನಾಟಕ ಸೇರಿದಂತೆ ಭಾರತದ ದಕ್ಷಿಣ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಬಯಲು ಸೀಮೆಯಲ್ಲಿ ಬಿಸಿಲಿನ ತಾಪ ಮುಂದುವರಿದಿದ್ದರೂ ಆಗಾಗ ಸುರಿಯುತ್ತಿರುವ ತುಂತುರು ಬಿಸಿಲಿನ ತಾಪದಿಂದ ಜನತೆಗೆ ವಿರಾಮ ನೀಡುತ್ತಿದೆ.