ಮುಂಗಾರು ಹಂಗಾಮಿಗೆ ರಸಗೊಬ್ಬರ ದಾಸ್ತಾನಿದೆ


ಬೆಂಗಳೂರು, ಜು. ೫- ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಅಗತ್ಯವಿರುವಷ್ಟು ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಇದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಸಭೆಯಲ್ಲಿಂದು ಹೇಳಿದರು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಯ ರಾಜೇಶ್‌ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸಾಲಿನಲ್ಲಿ ಮುಂಗಾರು ವಿಳಂಬವಾಗಿರುವುದು ಎಲ್ಲರಿಗೂ ಗೊತ್ತಿದೆ. ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಮುಂಗಾರು ಹಂಗಾಮಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಇದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.
ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಸಕಾಲದಲ್ಲಿ ರೈತರಿಗೆ ವಿತರಿಸುತ್ತೇವೆ ಎಂದು ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಭಂಟವಾಳ ಕ್ಷೇತ್ರ ವ್ಯಾಪ್ತಿಯಲ್ಲಿ ಮಣ್ಣು ಸುಧಾಕರ ಕೃಷಿ ಸುಣ್ಣದ ಕೊರತೆ ಬಗ್ಗೆ ಗಮನಹರಿಸಿ ನಿನ್ನೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗ ಕೃಷಿ ಸುಣ್ಣವು ಸೇರಿದಂತೆ ಎಲ್ಲವೂ ಅಲ್ಲಿ ಲಭ್ಯವಿದೆ. ಯಾವುದೇ ತೊಂದರೆ ಇಲ್ಲ ಎಂದು ಅವರು ಹೇಳಿದರು.