ಮುಂದುವರೆದ ವಿಜಯ್ ಸಿಬಿಐ ವಿಚಾರಣೆ

ಹುಬ್ಬಳ್ಳಿ, ನ 6: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್‍ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಹಾಗೂ ವಿನಯ್ ಮಾವ ಚಂದ್ರಶೇಖರ ಇಂಡಿ ಅವರ ವಿಚಾರಣೆಯನ್ನು ಸಿಬಿಐ ಅಧಿಕಾರಿಗಳು ಇಂದು ಸಹ ಮುಂದುವರೆಸಿದರು.
ವಿಜಯ್ ಕುಲಕರ್ಣಿ ಹಾಗೂ ಚಂದ್ರಶೇಖರ ಇಂಡಿ ಅವರು ಧಾರವಾಡದ ಉಪನಗರ ಠಾಣೆಗೆ ಇಂದು ಬೆಳಿಗ್ಗೆ ವಿಚಾರಣೆಗೆ ಹಾಜರಾದರು.
ಸಿಬಿಐ ಅಧಿಕಾರಿಗಳು ಯೋಗೀಶ್‍ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಇನ್ನೂ ಹೆಚ್ಚಿನ ಮಾಹಿತಿ ಕಲೆ ಹಾಕಲು ವಿಚಾರಣೆ ಮುಂದುವರೆಸಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏನು ಸತ್ಯಾಂಶ ಹೊರಬೀಳಲಿದೆ ಎಂದು ಕಾಯ್ದು ನೋಡಬೇಕಾಗಿದೆ.
ಕೆಲ ಗಂಟೆಗಳ ವಿಚಾರಣೆಯ ನಂತರ ವಿಜಯ್ ಕುಲಕರ್ಣಿ ಹಾಗೂ ಚಂದ್ರಶೇಖರ ಇಂಡಿ ಅವರನ್ನು ಸಿಬಿಐ ಅಧಿಕಾರಿಗಳು ಬಿಡುಗಡೆ ಮಾಡಿದ್ದು, ಮತ್ತೆ ಅವಶ್ಯಕತೆ ಬಿದ್ದರೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.
ನಿನ್ನೆ ವಿನಯ್ ಕುಲಕರ್ಣಿ ಹಾಗೂ ವಿಜಯ್ ಕುಲಕರ್ಣಿ ಇವರಿಬ್ಬರನ್ನೂ ವಿಚಾರಣೆಗೊಳಪಡಿಸಿದ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿ, ಒಂದು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ವಿನಯ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಮೇಲೆ ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.