ಮುಖ್ಯಮಂತ್ರಿಗಳು ಘೋಷಿಸಿರುವ ಪ್ಯಾಕೇಜ್‍ಃ ರೈತರಿಗೆ ಕೂಲಿ ಕಾರ್ಮಿಕರಿಗೆ ಅನ್ಯಾಯಃ ಶಂಕರಗೌಡ

ವಿಜಯಪುರ, ಮೇ.20-ಮುಖ್ಯಮಂತ್ರಿಗಳು ಘೋಷಿಸಿರುವ ಪ್ಯಾಕೇಜ್ ರೈತರಿಗೆ ಕೂಲಿ ಕಾರ್ಮಿಕರಿಗೆ ಅನ್ಯಾಯವಾಗಿದೆ ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ್ ಆರೋಪಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರು ಲಾಕ್‍ಡೌನ್ ಪ್ಯಾಕೇಜ್ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಿಲ್ಲ ರೈತರ ಸಾಲ ಮನ್ನಾ ಮಾಡಿಲ್ಲ ಈ ಪ್ಯಾಕೇಜ್ ಕೇವಲ ಮೂಗಿಗೆ ತುಪ್ಪ ಒರೆಸುವ ಕಾರ್ಯವಾಗಿದೆ ಎಂದು ಆಪಾದಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಮುಖ್ಯಮಂತ್ರಿಗಳು ರೈತರಿಗೆ ಕೂಲಿ ಕಾರ್ಮಿಕರಿಗೆ, ಕಟ್ಟಡ ಕಾರ್ಮಿಕರಿಗೆ, ಪತ್ರಕರ್ತರಿಗೆ ಇನ್ನುಳಿದ ಶ್ರಮಿಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುತ್ತಾರೆ ಎಂದು ಭರವಸೆಯಲ್ಲಿ ಜನ ಇತ್ತು ಕಳೆದ ವರ್ಷ ವಿವಿಧ ಶ್ರಮಿಕ ವರ್ಗಕ್ಕೆ ಘೋಷಣೆ ಮಾಡಿದ ಪ್ಯಾಕೇಜ್ ಇನ್ನೂ ತಲುಪಿಲ್ಲ ಮತ್ತೊಮ್ಮೆ ಇಂಥ ಪ್ಯಾಕೇಜ್ ಘೋಷಣೆ ಮಾಡಿದ್ದು ಇದರಿಂದ ಯಾರಿಗೂ ಅನುಕೂಲವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ರೈತರು ಬೆಳೆದ ಬೆಳೆಗಳು ಸೂಕ್ತ ಮಾರುಕಟ್ಟೆಯಿಲ್ಲದೆ ಹೊಲ ಗದ್ದೆಗಳಲ್ಲಿ ಹಾಳಾಗುತ್ತಿವೆ. ಪ್ರತಿನಿತ್ಯ ಮಾಧ್ಯಮಗಳಲ್ಲಿ ರೈತರು ಬೆಳೆದ ಬೆಳೆಗಳನ್ನು ರಸ್ತೆ ಮೇಲೆ ಎಸೆದು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಘಟನೆಗಳು ಸಾಮಾನ್ಯವಾಗಿವೆ ಕೂಡಲೇ ಮುಖ್ಯಮಂತ್ರಿಗಳು ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.