ಮುಖ್ಯಮಂತ್ರಿಗಳ ಪತ್ರಕ್ಕೆ ಮಹಾರಾಷ್ಟ್ರದ ಸ್ಪಂದನೆ ಇಲ್ಲ, ಅಧಿಕಾರಿಗಳ ಮೂಲಕ ಭೀಮಾ ನದಿಗೆ ನೀರು ಬಿಡುಗಡೆಗೆ ಯತ್ನ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ:ಮಾ.21: ತೀವ್ರ ಬರ ಎದುರಿಸುತ್ತಿರುವ ಕಲಬುರ್ಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಆದಾಗ್ಯೂ, ಸ್ಪಂದನೆ ಸಿಕ್ಕಿಲ್ಲ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತಿರಾಜ್, ಐಟಿಬಿಟಿ ಮತ್ತು ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು ಈಗಿರುವ ಪ್ರಮಾಣದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಆಗುವುದಿಲ್ಲ. ಹಾಗಾಗಿ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಹರಿಸುವಂತೆ ಮುಖ್ಯಮಂತ್ರಿಗಳು ಕಳೆದ ಮಾರ್ಚ್ 7ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಮುಖ್ಯಮಂತ್ರಿಗಳು ಬರೆದ ಪತ್ರಕ್ಕೆ ಸ್ಪಂದನೆ ಸಿಗದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಹಾರಾಷ್ಟ್ರದ ಅಧಿಕಾರಿಗಳ ಮೇಲೆ ನಿರಂತರ ಒತ್ತಡ ತರಲಾಗುತ್ತಿದೆ. ಕಲಬುರ್ಗಿ ಜಿಲ್ಲೆ ಹಾಗೂ ಈಗ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಅಫಜಲಪುರ ತಾಲ್ಲೂಕಿನಲ್ಲಿನ ಸಮಸ್ಯೆ ಬಗೆಹರಿಸಲು ಭೀಮಾ ನದಿಗೆ ನೀರು ಹರಿಸಲು ಪ್ರಯತ್ನ ನಡೆದಿದೆ. ಈ ನಡುವೆ ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಿಂದ ಸೋನ್ನ ಬ್ಯಾರೇಜ್‍ಗೆ ನೀರು ತರುವ ಪ್ರಯತ್ನ ಕೂಡ ನಡೆದಿದೆ. ಆ ನಿಟ್ಟಿನಲ್ಲಿ ಕಲಬುರ್ಗಿಯ ಪ್ರಾದೇಶಿಕ ಆಯುಕ್ತರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕುಡಿಯುವ ನೀರಿಗಾಗಿ ಹಣದ ಕೊರತೆ ಇಲ್ಲ ಎಂದು ತಿಳಿಸಿದ ಅವರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಖಾತೆಯಲ್ಲಿ 16 ಕೋಟಿ ರೂ.ಗಳು ಹಾಗೂ ಗ್ರಾಮೀಣ ಕುಡಿಯುವ ನೀರು ವಿಭಾಗದ ಖಾತೆಯಲ್ಲಿ 127 ಕೋಟಿ ರೂ.ಗಳ ಅನುದಾನ ಲಭ್ಯವಿದೆ. ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬಾಡಿಗೆ ಬೋರ್ ವೆಲ್ ಹಾಗೂ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಆ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ತಯಾರಿಸಿ ತುರ್ತು ಕ್ರಮವಹಿಸಿ ಕುಡಿಯುವ ನೀರು ಒದಗಿಸುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.