ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಸದ್ಯಕ್ಕಿಲ್ಲ: ತೆಲ್ಕೂರ್

ಕಲಬುರಗಿ,ಮೇ.29:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆ ಸದ್ಯಕ್ಕಿಲ್ಲ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರೂ ಆದ ರಾಜ್ಯ ಬಿಜೆಪಿ ವಕ್ತಾರ ಹಾಗೂ ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಅವರು ಹೇಳಿದರು.
ನಗರದ ಐವಾನ್ ಶಾಹಿ ಅತಿಥಿಗೃಹದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‍ಡಿಎ ಸರ್ಕಾರವು ಭಾನುವಾರಕ್ಕೆ ಏಳು ವರ್ಷಗಳ ಅವಧಿ ಹಾಗೂ ಎರಡನೇ ಅವಧಿಯಲ್ಲಿ ಎರಡು ವರ್ಷಗಳ ಅವಧಿ ಪೂರ್ಣ ಹಿನ್ನೆಲೆಯಲ್ಲಿ ಸ್ವಯಂ ಸೇವಾ ಕಾರ್ಯಕರ್ತರಿಂದ ಕೈಗೊಳ್ಳಲಾಗುವ ಸಾರ್ವಜನಿಕ ವಿಧಾಯಕ ಕಾರ್ಯಕ್ರಮಗಳ ಕುರಿತು ಕರೆದ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆ ವಿಚಾರ ಕೇವಲ ಊಹಾಪೋಹಗಳಿಂದ ಕೂಡಿದೆ. ಹಾಗಾಗಿ ಅಂತಹ ಊಹಾಪೋಹಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಎಲ್ಲ 120 ಜನ ಬಿಜೆಪಿ ಶಾಸಕರು ಕ್ಷೇತ್ರದಲ್ಲಿ ಮಹಾಮಾರಿ ಕೊರೋನಾ ಓಡಿಸಲಿಕ್ಕೆ ಯಾರು ತೊಂದರೆಯಲ್ಲಿದ್ದಾರೆಯೋ ಅವರಿಗೆ ಸಹಾಯಹಸ್ತ ಚಾಚುವ ಮೂಲಕ ಅದರ ವಿರುದ್ಧ ಹೋರಾಟಕ್ಕೆ ಮೊದಲ ಆದ್ಯತೆ ಕೊಡುವುದಾಗಿ ಸ್ವತ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಅದೇ ರೀತಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನಕುಮಾರ್ ಕಟಿಲ್ ಅವರು ಸಹ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಊಹಾಪೋಹ. ಯಾವುದಕ್ಕೂ ಕಿವಿಗೊಡದೇ ಕ್ಷೇತ್ರದಲ್ಲಿ ಕೊರೋನಾ ವಿರುದ್ಧ ಹೋರಾಡಿ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ನಮ್ಮ ಪ್ರಶ್ನಾತೀತ ನಾಯಕರು. ಅವರ ನೇತೃತ್ವದಲ್ಲಿ ಸರ್ಕಾರವು ಉತ್ತಮ ಆಡಳಿತ ನೀಡುತ್ತಿದ್ದು, ಕೊರೋನಾ ವಿರುದ್ಧದ ಹೋರಾಟದಲ್ಲಿ ನಾವೆಲ್ಲ ತೊಡಗಿಸಿಕೊಂಡಿದ್ದೇವೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆಯ ಕುರಿತು ರಾಜ್ಯದ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಅವರು ನೀಡಿದ ಹೇಳಿಕೆಯು ಸರ್ಕಾರಕ್ಕೂ ಹಾಗೂ ಪಕ್ಷಕ್ಕೂ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ. ಅವರು ಯಾವ ಅರ್ಥದಲ್ಲಿ ಹಾಗೂ ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಅದು ಅವರ ವೈಯಕ್ತಿಕ ಹೇಳಿಕೆ. ಈ ಕುರಿತು ಬೇಕಾದರೆ ಅವರನ್ನೇ ಕೇಳಿ ಎಂದು ಅವರು ಸಮಜಾಯಿಷಿ ನೀಡಿದರು.
ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದರೆ ಮುಂದೆ ಬದಲಾವಣೆಯಾಗುತ್ತಾರೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ತೆಲ್ಕೂರ್ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿಯೇ ನಾವು ಕೊರೋನಾ ವಿರುದ್ಧ ಹೋರಾಡುತ್ತಿದ್ದೇವೆ. ಆ ಕುರಿತು ಪ್ರತಿಕ್ರಿಯೆ ಅಪ್ರಸ್ತುತ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆ ಕುರಿತು ದೆಹಲಿಗೆ ಹೋಗಿರುವ ಕುರಿತು ಸಚಿವ ಸಿ.ಪಿ. ಯೋಗೇಶ್ವರ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಬಿಜೆಪಿ ಶಾಸಕರು ಒತ್ತಡ ತರುತ್ತಿರುವ ಕುರಿತು ಪ್ರಸ್ತಾಪಿಸಿದ ಅವರು, ಯಾರನ್ನು ಸಚಿವ ಸಂಪುಟದಿಂದ ಬಿಡಬೇಕು, ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೆವಾಡಗಿ, ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್, ನಗರ ಜಿಲ್ಲಾ ಮಾಧ್ಯಮ ಪ್ರಮುಖ ಅರುಣ್ ಕುಲಕರ್ಣಿ, ಸಂತೋಷ್ ಮುಂತಾದವರು ಉಪಸ್ಥಿತರಿದ್ದರು.