ಮುಷ್ಕರನಿರತ ಸಾರಿಗೆ ನೌಕರರ ದಿಢೀರ್ ವರ್ಗಾವಣೆ

ಬೆಂಗಳೂರು, ಏ.೧೦- ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದಿಗೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ನೌಕರರನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ವರ್ಗಾವಣೆ ಅಸ್ತ್ರ ಪ್ರಯೋಗಿಸಿದೆ.
ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಬದಲು, ತಂತ್ರಗಾರಿಕೆ ಅನುಸರಿಸುವ ಮೂಲಕ ಮುಷ್ಕರ ನಿರತ ಸಾರಿಗೆ ಸಿಬ್ಬಂದಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ನೌಕರರ ವರ್ಗಾವಣೆ
ಸಾರಿಗೆ ನಿಗಮದ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಳ್ಳಲು ಇತರ ನೌಕರರನ್ನು ಪ್ರಚೋದಿಸಿ, ಕರ್ತವ್ಯಕ್ಕೆ ಹಾಜರಾಗದಂತೆ ಸಿಬ್ಬಂದಿಗಳಿಗೆ ಬೆದರಿಕೆ ಒಡ್ಡಿ, ನಿಗಮದ ಬಸ್ಸುಗಳ ಕಾರ್ಯಾಚರಣೆಗೆ ಅಡ್ಡಿಪಡಿಸಿ ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿ ಎಚ್ಚರಿಕೆ ನೀಡಲಾಗಿದೆ.
ಸಾರಿಗೆ ಸಂಸ್ಥೆಯ ೨೪೪ ಚಾಲಕರು ಮತ್ತು ನಿರ್ವಾಹಕರು, ೫ ಜನ ಸಂಚಾರ ಮೇಲ್ವಿಚಾರಕ ಸಿಬ್ಬಂದಿಗಳು, ೩೪ ತಾಂತ್ರಿಕ ಸಿಬ್ಬಂದಿಗಳನ್ನು ಹಾಗೂ ೯ ಮಂದಿ ಇತರೆ ಸಿಬ್ಬಂದಿಗಳನ್ನು ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವಿಭಾಗಗಳಿಂದ ಬೇರೆ ವಿಭಾಗಗಳಿಗೆ ಕೂಡಲೇ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಿದ್ದಾರೆ.