ಮೂರು ರಾಜ್ಯಗಳ ಬಹಿರಂಗ ಪ್ರಚಾರಕ್ಕೆ ತೆರೆ


ನವದೆಹಲಿ, ಏ.೪- ದೇಶಾದ್ಯಂತ ಭಾರಿ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಸಮರದಲ್ಲಿ ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೆರಿಯಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆಬೀಳಲಿದೆ. ಅದೇ ರೀತಿ ಪ.ಬಂಗಾಳ ಮತ್ತು ಅಸ್ಸಾಂನಲ್ಲಿ ೩ನೇ ಹಂತದ ಮತದಾನಕ್ಕೆ ವೇದಿಕೆ ಸಜ್ಜಾಗಿದ್ದು, ಪ್ರಚಾರ ಇಂದು ಅಂತ್ಯಗೊಳ್ಳಲಿದೆ.
ತಮಿಳುನಾಡು ವಿಧಾನಸಭೆಯ ೨೩೪ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಏ. ೬ ರಂದು ಮತದಾನ ನಡೆಯಲಿದೆ. ಈ ಬಾರಿಯ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿದ್ದು, ನಟ, ರಾಜಕಾರಣಿ ಕಮಲ್‌ಹಾಸನ್ ನೇತೃತ್ವದ ಮಕ್ಕಳ್ ನೀದಿಮಯಂ ಪಕ್ಷ ಸ್ಪರ್ಧಿಸಿರುವುದು ಕುತೂಹಲ ಕೆರಳಿಸಿದೆ.
ಅಣ್ಣಾ ಡಿಎಂಕೆ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅಣ್ಣಾ ಡಿಎಂಕೆ ನಾಯಕರು ಅಬ್ಬರದ ಪ್ರಚಾರ ನಡೆಸಿ ಕಡೆ ಘಳಿಗೆಯಲ್ಲಿ ಮತದಾರರ ಮನಗೆಲ್ಲಲು ಕಸರತ್ತು ನಡೆಸಿದರು.
ಮತ್ತೊಂದೆಡೆ ಡಿಎಂಕೆ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ, ಡಿಎಂಕೆ ಧುರೀಣ ಎಂ.ಕೆ ಸ್ಟಾಲಿನ್ ಸೇರಿದಂತೆ ಅಣ್ಣಾ ಡಿಎಂಕೆ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಮತದಾರರನ್ನು ಓಲೈಸಿದ್ದಾರೆ.
ಕೇರಳದಲ್ಲಿ ೧೬೦ ವಿಧಾನಸಭಾ ಕ್ಷೇತ್ರಗಳಿಗೆ ಏ, ೬ರಂದು ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದೆ.
ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ರಣತಂತ್ರ ರೂಪಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಹಲವು ನಾಯಕರು ವ್ಯಾಪಕ ಪ್ರಚಾರ ನಡೆಸಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧಿಕಾರ ವಹಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿದ್ದಾರೆ. ಕೇರಳದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಏರಲು ತಂತ್ರಗಾರಿಕೆ ರೂಪಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ೨೦೧೯ರ ಲೋಕಸಭಾ ಚುನಾವಣೆಯಲ್ಲಿ ವಯನಾಡು ಕ್ಷೇತ್ರದಿಂದ ಗೆದ್ದು ಸಂಸದರಾಗಿದ್ದಾರೆ. ಹೀಗಾಗಿ ಈ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಸವಾಲಾಗಿ ಪರಿಣಮಿಸಿದೆ.