ಮೂಲಭೂತ ಸೌಲಭ್ಯ ಕಲ್ಪಿಸಲು ಒತ್ತಾಯ

ಕೋಲಾರ,ಡಿ.೧:ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ಅಂಗನವಾಡಿಗಳಲ್ಲಿ ಪೌಷ್ಠಿಕ ಆಹಾರದ ವಿತರಣೆ ಸಮರ್ಪಕವಾಗಿರಬೇಕು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಸಕಾಲದಲ್ಲಿ ವೇತನವನ್ನು ಪಾವತಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಮಾ ಮಹಾದೇವನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಶಾಲೆಗಳಲ್ಲಿ ಕಂಪ್ಯೂಟರ್ ಸೌಲಭ್ಯಗಳನ್ನು ಕಲ್ಪಿಸಿ, ಇದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕಂಪ್ಯೂಟರ್ ಜ್ಞಾನವನ್ನು ಪಡೆದುಕೊಳ್ಳಲು ಸಹಾಯವಾಗುತ್ತದೆ. ಶಾಲೆಗಳಲ್ಲಿ ಬಿಸಿಯೂಟ ಯೋಜನೆಯು ಸಮರ್ಪಕವಾಗಿ ನಡೆಯಬೇಕು ಎಂದು ತಿಳಿಸಿದರು.
ಪಶುಗಳಿಗೆ ಸಕಾಲದಲ್ಲಿ ಚಿಕಿತ್ಸೆಯನ್ನು ನೀಡಿ. ಘನ ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಜಿಲ್ಲೆಯ ಕೆರೆಗಳಲ್ಲಿ ಕ್ಯಾಟ್ ಪಿಷ್‌ಗಳನ್ನು ಸಾಕಾಣಿಕೆ ಮಾಡುತ್ತಿರುವುದು ಕಂಡು ಬಂದರೆ ಶಿಸ್ತು ಕ್ರಮ ಕೈಗೊಳ್ಳಿ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಜಿಲ್ಲೆಯ ಕೆರೆಗಳಲ್ಲಿ ಕ್ಯಾಟ್ ಪಿಷ್ ಸಾಕಾಣಿಕೆ ಮಾಡುತ್ತಿಲ್ಲ ಈ ಬಗ್ಗೆ ದೂರುಗಳು ಬಂದಿದ್ದು ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್ ಅವರು ಗ್ರಾಮ ಪಂಚಾಯತಿಗಳಲ್ಲಿ ವಿದ್ಯುತ್ ನಿಲುಗಡೆ ಮಡಿರುವ ಕೊಳವೆ ಬಾವಿಗಳ ಸಂಪರ್ಕಗಳಿಗೂ ಬೆಸ್ಕಾಂ ಅವರು ಬಿಲ್‌ಗಳನ್ನು ನೀಡುತ್ತಿದ್ದೂ, ಈ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ||ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಂ.ಜಿ. ಪಾಲಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.