ಮೂಲ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮದ್ದೂರು: ಏ.18:- ತಮಿಳು ಕಾಲೋನಿ ನಿವಾಸಿಗಳಿಗೆ ಶುದ್ಧಕುಡಿಯುವ ನೀರಿನ ಘಟಕ ಸ್ಥಾಪಿಸಿ ಮೂಲ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ಪುರಸಭೆ ಕಚೇರಿ ಬಳಿ ನಿರಂತರ ಪ್ರತಿಭಟನೆ ಮುಂದಾಗಿದ್ದಾರೆ.
ಪಟ್ಟಣದ ಪುರಸಭೆ ಕಚೇರಿ ಬಳಿ ಜಮಾವಣೆಗೊಂಡ ಕಾಲೋನಿ ನಿವಾಸಿಗಳು ಜಿಲ್ಲಾ ಹಾಗೂ ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕಳೆದ 15 ದಿನಗಳ ಹಿಂದೆ ಮೂಲ ಸೌಲಭ್ಯಗಳನ್ನು ಕಲ್ಪಿಸುವುದಾಗಿ ನೀಡಿದ್ದ ಭರವಸೆ ಈಡೇರಿಸದ ಬಗ್ಗೆ ಪ್ರತಿಭಟನಾ ನಿರತರು ದೂರಿದರು.
ತಮಿಳು ಕಾಲೋನಿಗೆ ಸ್ಥಳೀಯ ಅಧಿಕಾರಿಗಳೊಡನೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು ಕುಡಿಯುವ ನೀರಿನ ಘಟಕ, ಶೌಚಾಲಯ, ಹಕ್ಕುಪತ್ರ ವಿತರಣೆ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸುವಂತೆ ತಹಸೀಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳಿಗೆ ಈ ಹಿಂದೆ ಸೂಚನೆ ನೀಡಿದ್ದರೂ ಈವರೆವಿಗೂ ಯಾವುದೇ ಕ್ರಮಕ್ಕೆ ಮುಂದಾಗದಿರುವ ಕ್ರಮಖಂಡಿಸಿ ನಿರಂತರ ಪ್ರತಿಭಟನೆ ಕೈಗೊಂಡಿದ್ದಾರೆ.
ಮುಖ್ಯಾಧಿಕಾರಿ ಅಶೋಕ್ ಮತ್ತು ಚುನಾಯಿತ ಪ್ರತಿನಿಧಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸ್ಥಳೀಯ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವಂತೆ ಮತ್ತು ಕುಡಿಯುವ ನೀರಿನ ಘಟಕ ನಿರ್ಮಾಣ ಮತ್ತು ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗದ ಹೊರತು ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲವೆಂದು ಪಟ್ಟು ಹಿಡಿದಿದ್ದು ಪ್ರತಿಭಟನೆ ಮುಂದುವರೆಸಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳು ಸೌಜನ್ಯಕ್ಕೂ ಭೇಟಿ ನೀಡದ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತರ ಹಲವು ಬೇಡಿಕೆಗಳನ್ನು ಈಡೇರಿಸುವವರೆವಿಗೂ ನಿರಂತರ ಧರಣಿ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆ ವೇಳೆ ಸ್ಥಳೀಯ ಮುಖಂಡರಾದ ವೈದುನ, ಕುಪ್ಪಸ್ವಾಮಿ, ರಜಿನಿ, ರಘು, ಚಂದ್ರಶೇಖರ್, ಪ್ರಕಾಶ್, ರವಿ. ಶಾಂತಮ್ಮ, ನಂದ, ಪ್ರತಾಪ್, ಬೆಟ್ಟಮ್ಮ, ಚನ್ನಮ್ಮ ನೇತೃತ್ವ ವಹಿಸಿದ್ದರು.