ಬೆಂಗಳೂರು,ಜೂ.೧:ಕುಡಿಯುವ ನೀರಿನ ಉದ್ದೇಶಕ್ಕಾಗಿ ರಾಜ್ಯಸರ್ಕಾರ ಕೈಗೊಳ್ಳಲು ಮುಂದಾಗಿರುವ ಮೇಕೆದಾಟು ಯೋಜನೆಯಿಂದಾಗಿ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಉದ್ದೇಶಿತ ಮೇಕೆದಾಟು ಯೋಜನಗೆ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೆ ಸಚಿವರಿಂದ ಈ ಭರವಸೆ ಹೊರಬಿದ್ದಿದೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಅನುಕೂಲಕ್ಕಾಗಿ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರಲ್ಲಿ ದ್ವೇಷ, ಅಸೂಯೆ ಪಡುವುದು ಬೇಡ, ಸೌಹಾರ್ದತೆಯಿಂದ ಸಹಕರಿಸಬೇಕು ಎಂದು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು.
ಈಗಾಗಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಉಭಯ ರಾಜ್ಯಗಳು ಸಾಕಷ್ಟು ಕಚ್ಚಾಡಿವೆ. ಈಗ ಈ ಸಮಸ್ಯೆ ಬಗೆಹರಿದಿದೆ. ಆದರೆ,ಸಮುದ್ರಕ್ಕೆ ಹೋಗುವ ನೀರನ್ನು ಕುಡಿಯುವ ನೀರಿಗಾಗಿ ಮತ್ತು ರೈತರಿಗೆ ಅನುಕೂಲ ಕಲ್ಪಿಸಲು ಮೇಕೆದಾಟು ಯೋಜನೆ ಕೈಗೊಳ್ಳಲಾಗುತ್ತಿದೆ. ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿ ತೊಂದರೆಯಾಗುವುದಿಲ್ಲ ಎಂದು ಹೇಳಿದರು.
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸಿದ ನಂತರ ಬಿಜೆಪಿ ಸರ್ಕಾರ ಇದಕ್ಕಾಗಿ ೧ ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಬಿಡುಗಡೆ ಮಾಡಿತ್ತು. ಈ ಯೋಜನೆ ಜಾರಿಗೆ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೂಚಿಸಿದರು.
ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡನ್ನು ದ್ವೇಷಿಸುವ ಉದ್ದೇಶವಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.