
ಸಂಜೆವಾಣಿ ವಾರ್ತೆ
ಬಳ್ಳಾರಿ,ಮೇ 18 : ಜಿಲ್ಲೆಯಲ್ಲಿ ಮೇ 20 ಮತ್ತು 21 ರಂದು ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶ ಪರೀಕ್ಷೆ ನಡೆಯಲಿದ್ದು, ಯಾವುದೇ ಅಡಚಣೆಗಳು ಉಂಟಾಗದಂತೆ ಪರೀಕ್ಷಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಬುಧವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ವೃತ್ತಿಪರ ಕೋಸ್‍ಗಳ ವೃತ್ತಿಪರ ಕೋರ್ಸ್‍ಗಳ ಪ್ರವೇಶಾತಿಗಾಗಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಿರುವ ವೃತ್ತಿಪರ ಕೋರ್ಸ್‍ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಮೇ 20 ಮತ್ತು 21 ರಂದು ನಡೆಯಲಿದ್ದು, ಮೇ 22 ಕನ್ನಡ ಭಾಷೆ ಪರೀಕ್ಷೆ ಒಳಗೊಂಡಿರುತ್ತದೆ. ಮಾರ್ಗಸೂಚಿ ಅನ್ವಯ ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರದಲ್ಲಿ ಹಾಗೂ ಪ್ರಶ್ನೆ ಪತ್ರಿಕೆ ರವಾನೆ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ಈಗಾಗಲೇ ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿ, ಅಧಿಕಾರಿಗಳಿಗೆ ಮಾರ್ಗಸೂಚಿಗಳ ಮಾಹಿತಿ ನೀಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲಸೌಕರ್ಯ ಪರಿಶೀಲಿಸಬೇಕು ಎಂದರು.
ಪರೀಕ್ಷಾ ಕೇಂದ್ರದಲ್ಲಿ ಉಪ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಬೇರೆ ಯಾರೂ ಮೊಬೈಲ್ ಬಳಸುವಂತಿಲ್ಲ. ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ.
ಪ್ರಶ್ನೆ ಪತ್ರಿಕೆ ಮತ್ತು ಓಎಂಆರ್ ಶೀಟ್ ತೆರೆಯುವಾಗ ಒಂದು ಸ್ಕ್ವಾಡ್ ವೀಡಿಯೊಗ್ರಾಫರ್ ಜೊತೆಯಲ್ಲಿ ಇರಬೇಕು. ಪರೀಕ್ಷಾ ಸಮಯದಲ್ಲಿ ಯಾವುದೇ ರೀತಿಯ ಲೋಪದೋಷಗಳು ಕಂಡಲ್ಲಿ ಉಪ ಮುಖ್ಯ ಅಧೀಕ್ಷಕರ ಗಮನಕ್ಕೆ ತರಬೇಕು ಎಂದರು.
ಪರೀಕ್ಷಾ ಕೇಂದ್ರದಲ್ಲಿ ಕ್ಯಾಲ್ಕುಲೇಟರ್, ಮೊಬೈಲ್ ಫೋನ್, ವೈಟನರ್, ಪೆನ್ಸಿಲ್, ಮಾಪಕಗಳ ಸೇರಿ ಎಲೆಕ್ಟ್ರಾನಿಕ್ ಸಾಧನಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಗೆ ನೋಂದಾಯಿತ ವಿದ್ಯಾರ್ಥಿಗಳು ಪರೀಕ್ಷೆ ಆರಂಭವಾಗುವ ಕನಿಷ್ಠ ಎರಡು ಗಂಟೆಯ ಮೊದಲು ಪರೀಕ್ಷಾ ಕೇಂದ್ರದಲ್ಲಿ ಇರಬೇಕು. ಪರೀಕ್ಷೆಯ ಅವಧಿ ಮುಗಿಯುವವರೆಗೆ ಯಾವುದೇ ಅಭ್ಯರ್ಥಿಯನ್ನು ಪರೀಕ್ಷಾ ಕೊಠಡಿಯಿಂದ ಹೊರಹೋಗಲು ಅನುಮತಿಸಬಾರದು ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿರುವ 5946 ವಿದ್ಯಾರ್ಥಿಗಳು:
ಜಿಲ್ಲೆಯಲ್ಲಿ ವೃತ್ತಿಪರ ಕೋರ್ಸ್‍ಗಳಿಗೆ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಟ್ಟು 5946 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಎಸ್‍ಎಸ್‍ಎ ಪ್ರಥಮ ದರ್ಜೆ ಕಾಲೇಜ್ ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಸೇರಿ ಎರಡು ಹೊಸದಾಗಿ ಪರೀಕ್ಷಾ ಕೇಂದ್ರಗಳನ್ನಾಗಿ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಗೇಂದ್ರ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.