ಮೇ 7ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಸೂಚನೆ

ಕಲಬುರಗಿ:ಮೇ.5:ಕಲಬುರಗಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಮೇ 7 ಮತದಾನ ನಡೆಯಲಿದೆ. ಮತದಾನ ದಿನದಂದು ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ3(ಎ) ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆ ಕಲಂ135(ಬಿ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ನಿಯೋಜಕರು ಅವಕಾಶ ಮಾಡಿಕೊಡಬೇಕೆಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳಾದ ಶರಣಪ್ಪ ಹಳಿಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದಕ್ಕೆ ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಸದರಿ ದಿನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕೆಂದು ಅವರು ತಿಳಿಸಿದ್ದಾರೆ.