ಮೈತ್ರಿಗೆ ಬಂದವರ ಹೆಸರು ಬಹಿರಂಗಕ್ಕೆ ಸಿಎಂ ಆಗ್ರಹ

ಹುಬ್ಬಳ್ಳಿ,ಏ.೩೦-ರಾಷ್ಟ್ರೀಯ ಪಕ್ಷಗಳ ನಾಯಕರು ಮೈತ್ರಿಗೆ ಬಂದವರ ಹೆಸರನ್ನು ಬಹಿರಂಗ ಪಡಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್.ಡಿ ದೇವೇಗೌಡರನ್ನು ಒತ್ತಾಯಿಸಿದ್ದಾರೆ.
ದೇವೇಗೌಡರು ಮಾಧ್ಯಮವೊಂದಕ್ಕೆ ಸಂದರ್ಶನ ನೀಡುವ ವೇಳೆ ೨ ರಾಷ್ಟ್ರೀಯ ಪಕ್ಷಗಳ ಮುಖಂಡರು ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಸಂಬಂಧ ತಮ್ಮನ್ನು ಭೇಟಿಯಾಗಿದ್ದರು. ತಾವು ಈ ನಾಯಕರನ್ನು ಎಚ್.ಡಿ.ಕುಮಾರಸ್ವಾಮಿಯವರ ಬಳಿ ಕಳುಹಿಸಿದ್ದಾಗಿ ಹೇಳಿಕೆ ನೀಡಿದ್ದರು.
ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳ ದೂತರ ಹೆಸರನ್ನು ಬಹಿರಂಗ ಪಡಿಸಬೇಕೆಂದು ಹೇಳಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಮ್ಮ ಬಗ್ಗೆ ಅಪಾರ ನೀರಿಕ್ಷೆ ಹೊಂದಿದ್ದಾರೆ. ಅದಕ್ಕಾಗಿಯೇ ನಾನೇ ಮುಖ್ಯಮಂತ್ರಿಗಳು ಎಂಬ ಮಾತಾನಾಡಿದ್ದಾರೆ. ಅವರ ಮಾತಿಗೆ ನಾನು ಚಿರಋಣಿಯಾಗಿದ್ದೇನೆ ಎಂದರು.
ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದಾಗಿ ತಿಳಿಸಿದ್ದೆ, ನಡ್ಡಾ ಹಾಗೂ ಅಮಿತ್ ಶಾ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ಮುಖ್ಯಮಂತ್ರಿ ಆಯ್ಕೆ ಮಾಡುವ ಕುರಿತು ಬಿಜೆಪಿ ಸ್ಪಷ್ಟ ನಿಲುವು ಹೊಂದಿದೆ. ಮುಖ್ಯಮಂತ್ರಿ ಆಯ್ಕೆ ಕೇಂದ್ರ ಸಂಸದೀಯ ಮಂಡಳಿ ಶಾಸಕರು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.
ರಾಜ್ಯದಲ್ಲಿ ಪ್ರವಾಹ ಬಂದಾಗ ಪ್ರಧಾನಿ ಅವರು ರಾಜ್ಯಕ್ಕೆ ಭೇಟಿ ನೀಡಲಿಲ್ಲ ಎಂಬ ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ಪ್ರವಾಹ ಬಂದಾಗ ಮೋದಿ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ಅನುದಾನ ಒದಗಿಸಿದೆ. ಮನೆ ಬಿದ್ದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ೨೦೦೦ ಕೊಡುತ್ತಿತ್ತು. ಬಿಜೆಪಿ ಸರ್ಕಾರದಲ್ಲಿ ಅತಿವೃಷ್ಠಿ ಪರಿಹಾರವನ್ನು ಹೆಚ್ಚಳ ಮಾಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆ ಸಂದರ್ಭದಲ್ಲಿ ಪ್ರಿಯಾಂಕಾ ಇಲ್ಲವೇ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನಾ ಏಕೆ ಹೇಳಲಿಲ್ಲ ಎಂದು ಎದುರೇಟು ನೀಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿಯವರನ್ನು ವಿಷದ ಹಾವು ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನ ಉಳಿದ ನಾಯಕರಿಂದಲೂ ಇದೇ ರೀತಿಯ ಪ್ರತಿಕ್ರಿಯೆ ಬರುವುದು ಸಹಜ ಎಂದರು. ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿಗೆ ಪಿಯೂರಿ ನಡೆಸಲಾಗುತ್ತಿದೆ ಎಂಬ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಳ್ಳನ ಮನಸ್ಸು ಉಳ್ಳುಳ್ಳಗೆ ಎಂದು ಗೇಲಿ ಮಾಡಿದರು.