ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆ ಚಾಲನೆ: ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲು ಡಿಕೆಶಿ ಮನವಿ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.27:- ಮಹಿಳಾ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳಲ್ಲಿ ಬಹು ಮುಖ್ಯವಾದ ಕುಟುಂಬದ ಯಜಮಾನಿ ಬ್ಯಾಂಕ್ ಖಾತೆಗೆ 2 ಸಾವಿರ ರೂ. ನೀಡುವ ಮಹಾತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆಗೆ ಆ. 30 ರಂದು ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್‍ಗಾಂಧಿ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಮುಖಂಡರು ಭಾಗವಹಿಸಿ ಯಶಸ್ವಿಗೊಳಿಸಿ ಕೊಡಬೇಕೆಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಪ್ರಥಮ ಬಾರಿಗೆ ಭೇಟಿ ನೀಡಿ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲೆ ಕಾಂಗ್ರೆಸ್ ಭದ್ರ ಕೋಟೆಯಾಗಿದೆ. ನಾಲ್ಕು ಕ್ಷೇತ್ರಗಳಲ್ಲಿ ಮೂರಲ್ಲಿ ನಮ್ಮ ಪಕ್ಷದ ಶಾಸಕರು ಇದ್ದಾರೆ. ಹೀಗಾಗಿ ಪಕ್ಷದ ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವಂತೆ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರು ಕಾರ್ಯಯೋಜನೆಗಳನ್ನು ರೂಪಿಸಿ, ಅವರನ್ನು ಕರೆದುಕೊಂಡು ಬರುವ ಜವಾಬ್ದಾರಿ ನಿಮ್ಮೆಲ್ಲರಾದ್ದಾಗಿದೆ ಎಂದರು.
ನಮ್ಮದು ನುಡಿದಂತೆ ನಡೆಯುವ ಸರ್ಕಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಸಚಿವ ಸಂಪುಟದ ಎಲ್ಲಾ ಸಚಿವರು ಹಾಗೂ ಶಾಸಕರು ಐದು ಗ್ಯಾರಂಟಿಯನ್ನು ಈಡೇರಿಸುವ ನಿಟ್ಟಿನಲ್ಲಿ ತ್ವರಿತವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ. ಈಗಾಗಲೇ ಶಕ್ತಿ ಯೋಜನೆ ಜಾರಿಯಲ್ಲಿದೆ. ಗೃಹ ಜ್ಯೊತಿ ಯೋಜನೆ ಉಚಿತ ವಿದ್ಯುತ್ ನೀಡುವ ಯೋಜನೆ ಜುಲೈನಿಂದಲೇ ಜಾರಿಯಲ್ಲಿದೇ. ಬಿಪಿಎಲ್ ಪಡಿತರ ಕಾರ್ಡುನ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವ ಯೋಜನೆ ಅನುಷ್ಠಾನಗೊಂಡಿದೆ. ಬಹು ಮುಖ್ಯವಾಗಿರುವ ಗೃಹ ಲಕ್ಷ್ಮಿ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಅರ್ಜಿಗಳನ್ನು ಅಹ್ವಾನಿಸಿ, ಎಲ್ಲವು ಸಹ ಸಿದ್ದತೆಯಾಗಿದೆ. ರಾಹುಲ್ ಗಾಂಧಿ ಅವರು ಆ. 30 ರಂದು ಚಾಲನೆ ನೀಡುತ್ತಿದ್ದಂತೆ ರಾಜ್ಯ ಎಲ್ಲಾ ಮನೆಗಳ ಕುಟುಂಬದ ಯಜಮಾನಿಗೆ ಬ್ಯಾಂಕ್ ಖಾತೆಗೆ 2 ಸಾವಿರ ರಊ. ಜಮಾ ಆಗಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತ ಕಾಂಗ್ರೆಸ್ ಕಚೇರಿ ನಿರ್ಮಾಣ ವಾಗಬೇಕು. ಇದಕ್ಕಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲೆಯ ಶಾಸಕರು ಕೈ ಜೋಡಿಸಿ ನಗರದ ವ್ಯಾಪ್ತಿಯಲ್ಲಿ ಕನಿಷ್ಟ 1 ಎಕರೆ ಜಮೀನು ಖರೀದಿ ಮಾಡಿ, ಕೆಪಿಸಿಸಿಗೆ ನೀಡಿದರೆ, ತಕ್ಷಣದಿಂದಲೇ ಕಚೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುತ್ತೇವೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣವಾಗಿಬೇಕು ಎಂದು ಡಿ.ಕೆ. ಶಿವಕುಮಾರ್ ಖಡಕ್ ಆಗಿ ಸೂಚನೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಉಪ ಮುಖ್ಯಮಂತ್ರಿಗಳನ್ನು ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿ, ಚಾಮರಾಜನಗರ ಜಿಲ್ಲೆಗೆ ಉಪ ಮುಖ್ಯಮಂತ್ರಿಗಳಾದ ನಂತರ ಪ್ರಥಮ ಬಾರಿಗೆ ಡಿ.ಕೆ.ಶಿವಕುಮಾರ್ ಅವರು ಆಗಮಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಹುರಿದುಂಬಿಸಿ, ಉಪಯುಕ್ತ ಕಾರ್ಯಕ್ರಮಗಳನ್ನು ನೀಡುವ ಮೂಲಕ ಸಂಘಟಿಸಿದರು. ಸಂಘಟನಾ ಚತುರ ಆಗಿರುವ ಡಿ.ಕೆ. ಶಿವಕುಮಾರ್ ಕೋವಿಡ್ ಸಂದರ್ಭದಲ್ಲಿ ತೆಗೆದುಕೊಂಡ ತೀರ್ಮಾನಗಳು ಇನ್ನು ಸಹ ಜನಮಾನಸದಲ್ಲಿದ್ದಾರೆ. ಜಿಲ್ಲೆಯಲ್ಲಿ ಆಕ್ಸಿಜನ್ ದುರಂತವಾಗಿ 30ಕ್ಕು ಹೆಚ್ಚು ಜನರು ಮೃತಪಟ್ಟರು. ಆ ಕುಟುಂಬಗಳಿಗೆ ಸರ್ಕಾರದ ನೆರವು ಬಾರದ ಹಿನ್ನೆಲೆಯಲ್ಲಿ ಸ್ವತಃ ಡಿ.ಕೆ. ಶಿವಕುಮಾರ್ ಒಂದು ಲಕ್ಷ ರೂ.ಗಳನ್ನು ನೀಡಿ ಸಾಂತ್ವನ ಹೇಳಿದ್ದರು. ಬಿಜೆಪಿ ಸರ್ಕಾರದ ವೈಫಲ್ಯವನ್ನು ಜನರಲ್ಲಿ ಅರಿವು ಮೂಡಿಸಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖವಾಗಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಕಾರಣಕರ್ತರು ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಸಿ. ಪುಟ್ಟರಂಗಶೆಟ್ಟಿ, ಎಚ್.ಎಂ. ಗಣೇಶ್ ಪ್ರಸಾದ್, ದರ್ಶನ್ ಧ್ರುವನಾರಾಯಣ್, ನೆಲಮಂಗಲದ ಶಾಸಕ ಶ್ರೀನಿವಾಸ್, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಮಾಜಿ ಸಂಸದ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್. ಮಹದೇವ್, ಬ್ಲಾಕ್ ಅಧ್ಯಕ್ಷರಾದ ಎ.ಎಸ್. ಗುರುಸ್ವಾಮಿ, ಮಹಮದ್ ಅಸ್ಗರ್, ತೋಟೇಶ್, ಮಹೇಂದ್ರ ವರ್ಮ, ಹೊಂಗನೂರು ಚಂದ್ರು, ಜಿ.ಪಂ. ಮಾಜಿ ಸದಸ್ಯ ಕಾಗಲವಾಡಿ ಸದಾಶಿವಮೂರ್ತಿ, ಹೊಂಗನೂರು ಜಯರಾಜ್, ಗ್ರಾ.ಪಂ. ಅಧ್ಯಕ್ಷ ಪಿ. ಶೇಖರ್, ಪದ್ಮ ಪುರುಷೋತ್ತಮ್ ಮೊದಲಾದವರು ಇದ್ದರು