ಮೊದಲ ದಿನವೇ ಕೃಷಿ ಕಾಯ್ದೆ ವಾಪಸ್

ನವದೆಹಲಿ, ನ.೨೮- ಸಂಸತ್ತಿನ ಚಳಿಗಾಲದ ಅಧಿವೇಶನ ನಾಳೆಯಿಂದ ಡಿಸೆಂಬರ್ ೨೩ ತನಕ ನಡೆಯಲಿದ್ದು ಮೊದಲ ದಿನವೇ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ
ಹಿನ್ನೆಲೆಯಲ್ಲಿ ಈಗಾಗಲೇ ಆಡಳಿತರೂಢ ಬಿಜೆಪಿ ತನ್ನ ಎಲ್ಲಾ ಸದಸ್ಯರಿಗೆ ನಾಳೆ ಕಡ್ಡಾಯವಾಗಿ ಸದನದಲ್ಲಿ ಹಾಜರಿರುವಂತೆ ವಿಪ್ ಜಾರಿ ಮಾಡಿದೆ. ಇದರ ಜೊತೆಗೆ ಕಾಂಗ್ರೆಸ್ ಕೂಡ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಉಭಯ ಸದನಗಳಲ್ಲಿ ಕೃಷಿ ಕಾಯ್ದೆಯನ್ನು ಮಂಡಿಸಿ ಕಾನೂನಾತ್ಮಕವಾಗಿ ಅದನ್ನು ಹಿಂದಕ್ಕೆ ಪಡೆಯುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ.
ರೈತರಿಗೆ ಮಾರಕವಾಗುವ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಕಳೆದ ಒಂದು ವರ್ಷದಿಂದ ರೈತರು ದೆಹಲಿಯ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸತ್ನಲ್ಲಿ ಕಾಯ್ದೆಯನ್ನು ಮಂಡಿಸಿ ಸಂಪೂರ್ಣವಾಗಿ ವಾಪಸ್ ಪಡೆಯುವ ತನಕ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ರೈತರು ಬಿಗಿಪಟ್ಟಿ ಪಟ್ಟುಹಿಡಿದಿದ್ದಾರೆ.

ಚಳಿ ಬಿಡಿಸಲು ಮುಂದಾದ ವಿಪಕ್ಷಗಳು:

ಬೆಲೆ ಏರಿಕೆ ರೈತರ ಹೋರಾಟ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿರೋಧಪಕ್ಷಗಳು ಕೇಂದ್ರ ಸರ್ಕಾರದ ಚಳಿ ಬಿಡಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಪಕ್ಷಗಳು ಒಗ್ಗೂಡಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲು ಅನುಕೂಲವಾಗುವಂತೆ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರಮುಖ ವಿರೋಧ ಪಕ್ಷಗಳ ನಾಯಕರ ಸಭೆ ಕರೆಯಲಾಗಿದೆ.

ವಿರೋಧಪಕ್ಷಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಮುಂದಾಗಿದ್ದು ಅದಕ್ಕೆ ಸೂಕ್ತ ತಿರುಗೇಟು ನೀಡಲು ಕೂಡ ಆಡಳಿತ ಪಕ್ಷ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ

ಸುಗಮ ಕಲಾಪಕ್ಕೆ ಮನವಿ

ನಾಳೆಯಿಂದ ಸಂಸತ್ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸರ್ವ ಪಕ್ಷಗಳ ನಾಯಕರ ಸಭೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಿತು.

ದ ಡಿಸೆಂಬರ್೨೩ ತನಕ ನಡೆಯಲಿರುವ ಅಧಿವೇಶನದಲ್ಲಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಪಕ್ಷಗಳ ರಾಜಕೀಯ ನಾಯಕರಿಗೆ ಮನವಿ ಮಾಡಿದ್ದಾರೆ.

ಕೃಷಿ ಕಾಯ್ದೆಗಳನ್ನು ಅಧಿಕೃತವಾಗಿ ಸಂಸತ್ತಿನ ಎರಡೂ ಸದನಗಳಲ್ಲಿ ಮಂಡಿಸಿ ವಾಪಸ್ ಪಡೆಯುವ ಕಾನೂನು ಪ್ರಕ್ರಿಯೆಗಳನ್ನು ಪೂರ್ಣ ಮಾಡಲಾಗುವುದು ಇದಕ್ಕೆ ಎಲ್ಲ ಪಕ್ಷಗಳ ಸಹಕಾರ ಇರಲಿ ಎಂದು ಮನವಿ ಮಾಡಿದ ಅವರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದು ಅದರಲ್ಲೂ ಕನಿಷ್ಠ ಬೆಂಬಲ ಬೆಲೆ ನೀಡುವ ಸಂಬಂಧ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎನ್ನುವ ವಿಷಯವನ್ನು ಅವರು ರಾಜಕೀಯ ಪಕ್ಷಗಳ ನಾಯಕರ ಗಮನಕ್ಕೆ ತಂದಿದ್ದಾರೆ

ಸಭೆಯಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಪ್ರಹ್ಲಾದ್ ಜೋಶಿ, ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅದೀರ್ ರಂಜನ್ ಚೌಧರಿ, ನ್ಯಾಷನಲ್ ಕಾನ್ಫರೆನ್ಸ್ ಸಬ್ಜೆಕ್ಟ ಫಾರೂಕ್ ಅಬ್ದುಲ್ಲಾ, ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.