ಮೊದಲ ದಿನ ಸಿಇಟಿ ಸುಸೂತ್ರ

ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಎನ್‌ಎಂಕೆ ಆರ್.ವಿ ಕಾಲೇಜು ಬಳಿ ವಿದ್ಯಾರ್ಥಿಗಳು ಕಾಯುತ್ತಿರುವುದು.

ಬೆಂಗಳೂರು, ಮೇ.೨೦- ಭವಿಷ್ಯದ ಬಾಗಿಲೆಂದೇ ಬಿಂಬಿಸಲಾಗಿರುವ ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮೊದಲ ದಿನ ಸುಸೂತ್ರವಾಗಿ ನಡೆಯಿತು.
ರಾಜಧಾನಿ ಬೆಂಗಳೂರು ಸೇರಿದಂತೆ ಇಂದು ಮತ್ತು ನಾಳೆ ೫೯೨ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯುತ್ತಿದ್ದು, ಬರೋಬ್ಬರಿ ೨ ಲಕ್ಷದ ೬೦ ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಬೆಂಗಳೂರಿನ ೧೨೨ ಕೇಂದ್ರಗಳಲ್ಲಿ ನಡೆಯಲಿರುವ ಸಿಇಟಿ ಪರೀಕ್ಷೆಯ ಮೊದಲ ದಿನವೇ ನೂತನ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೆ ಕಾರಣವಾಗಿತ್ತು.
ಈ ಹಿನ್ನೆಲೆ ಇಂದು ಬೆಳಗ್ಗೆ ೧೦.೩೦ಕ್ಕೆ ಇದ್ದ ಪರೀಕ್ಷೆಗೆ ಬೆಳಗ್ಗೆ ೮ ಗಂಟೆ ವೇಳೆಗೆ ವಿದ್ಯಾರ್ಥಿಗಳು ಪರೀಕ್ಷೆ ಕೇಂದ್ರ ತಲುಪಿದರು.
ಮೊದಲಿಗೆ ಜೀವಶಾಸ್ತ್ರ, ಮಧ್ಯಾಹ್ನ ೨.೩೦ಕ್ಕೆ ಗಣಿತ ಪರೀಕ್ಷೆ ಬರೆದರು. ಇನ್ನೂ ನಾಳೆ ಮೇ ೨೧ರಂದು ಬೆಳಗ್ಗೆ ೧೦.೩೦ಕ್ಕೆ ಭೌತಶಾಸ್ತ್ರ ಮತ್ತು ೨.೩೦ಕ್ಕೆ ರಾಸಾಯನಿಕ ಶಾಸ್ತ್ರ ಪರೀಕ್ಷೆಗಳು ನಡೆದವು. ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು. ಸುಮಾರು ೮೫ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಇನ್ನೂ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.ಸಿಇಟಿ ಪರೀಕ್ಷೆಯೂ ನಾಳೆ, ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿತ್ತು.ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೇಂದ್ರಗಳು ಮುಚ್ಚುವಂತೆ ಆದೇಶಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೩.೫೦ರವರೆಗೆ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ ಜಾರಿ ಮಾಡಿ ಪೊಲೀಸ್ ಆಯುಕ್ತರು(ಪ್ರಭಾರ), ಸಂಚಾರ ವಿಭಾಗದ ವಿಶೇಷ ಪೊಲೀಸ್ ಆಯುಕ್ತರಾದ ಡಾ. ಎಂ.ಎ. ಸಲೀಂ ಅವರು ನಿನ್ನೆ ಆದೇಶ ಹೊರಡಿಸಿದ್ದರು.
ಸಿಎಂ ಮನವಿ..!
ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಪ್ರಮಾಣ ವಚನ ಸಮಾರಂಭದಿಂದಾಗಿ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನಾನೂಕೂಲ ಆಗದಂತೆ ಪೊಲೀಸರು ಎಚ್ಚರಿಕೆಯಿಂದ ಕ್ರಮಕೈಗೊಳ್ಳಬೇಕು.
ಪ್ರಮಾಣ ವಚನ ಸಮಾರಂಭದ ಕಾರಣದಿಂದಾಗಿ ಕಂಠೀರವ ಕ್ರೀಡಾಂಗಣದ ಸುತ್ತಮುತ್ತ ವಾಹನ ದಟ್ಟಣೆ ಸಂಭವಿಸುವ ಸಾಧ್ಯತೆ ಇದೆ. ಸಮಾರಂಭಕ್ಕೆ ಆಗಮಿಸುವವರು ಪೊಲೀಸರಿಗೆ ಸಹಕಾರ ನೀಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.