ಮೊದಲ ಸಂಪುಟದಲ್ಲೇ ಗ್ಯಾರಂಟಿ ಈಡೇರಿಕೆ: ಡಿಕೆಶಿ

ಬೆಂಗಳೂರು, ಮೇ ೧೯ ನೂತನ ಸಚಿವ ಸಂಪುಟ ರಚನೆ ಕುರಿತಂತೆ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ನಿಯೋಜಿತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನೂತನ ಸರ್ಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಪಕ್ಷ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ ಎಂದು ಅವರು ಆಶ್ವಾಸನೆ ನೀಡಿದರು.
ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಎಲ್ಲ ಜನತೆಗೆ, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಧನ್ಯವಾದ ಅರ್ಪಿಸಿದರು. ಇದು ನೀವು ಬಯಸಿದ ಸರ್ಕಾರ ಎಂದು ಹೇಳಿದರು.
ಮೊದಲ ಸಚಿವ ಸಂಪುಟದಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಮತದಾರರಿಗೆ ಕೊಟ್ಟಿರುವ ಆಶ್ವಾಸನೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದರು.
ಈ ಗ್ಯಾರಂಟಿ ಯೋಜನೆಗಳು ಕೇವಲ ಡಿಕೆ ಶಿವಕುಮಾರ್ ಅಥವಾ ಸಿದ್ದರಾಮಯ್ಯ ಅವರ ಗ್ಯಾರಂಟಿ ಅಲ್ಲ. ಇದು ಕಾಂಗ್ರೆಸ್ ಗ್ಯಾರಂಟಿ. ಈ ಯೋಜನೆಗಳನ್ನು ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ತಾವು ಮತ್ತು ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಈ ಯೋಜನೆ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ನಾಳೆ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೇಶದ ಅನೇಕ ನಾಯಕರಿಗೆ ಆಹ್ವಾನ ನೀಡಲಾಗಿದೆ. ಪಕ್ಷದ ಎಲ್ಲಾ ಕಾರ್ಯಕರ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದ ಅವರು ೧೧ ಗಂಟೆಯೊಳಗಾಗಿ ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಬೇಕು. ಈ ಕಾರ್ಯಕ್ರಮಕ್ಕೆ ದೇಶದ ವಿವಿಧ ಭಾಗಗಳಿಂದ ಆಗಮಿಸುತ್ತಿದ್ದಾರೆ. ಅವರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ನಾಳೆ ನಡೆಯುವ ಕಾರ್ಯಕ್ರಮ ಪಕ್ಷಾತೀತವಾಗಿ ನಡೆಯಲಿದೆ .ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೆ ಆಹ್ವಾನ ನೀಡುತ್ತೇವೆ. ಎಲ್ಲರೂ ಭಾಗವಹಿಸಬೇಕು ಎಂದು ಮನವಿ ಮಾಡಿದರು.