(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು, ಜು. ೨೧- ರಾಜ್ಯದ ೧೦೦ ಮೊರಾರ್ಜಿ ವಸತಿ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಅನ್ವಯವಾಗುವಂತೆ ವಿಜ್ಞಾನ ಮತ್ತು ವಾಣಿಜ್ಯ ಕೋರ್ಸ್‌ಗಳನ್ನುಪ್ರಾರಂಭಿಸುವ ಕುರಿತಂತೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ವಿಧಾನಪರಿಷತ್‌ನಲ್ಲಿಂದು ಹೇಳಿದರು.
೨೦೧೯-೨೦ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದ ೧೦೦ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪದವಿಪೂರ್ವ ವಿಭಾಗದಲ್ಲಿ ವಿಜ್ಞಾನ ಮತ್ತು ವಾಣಿಜ್ಯ ಕೋರ್ಸ್‌ಗಳನ್ನು ಪ್ರಾರಂಭಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಮುಂದಿನ ವರ್ಷದಿಂದಲೇ ಈ ಎರಡೂ ಕೋರ್ಸ್‌ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ಪರವಾಗಿ ಉತ್ತರ ನೀಡಿದ ಸಚಿವರು, ೨೦೨೩-೨೪ನೇ ಸಾಲಿನ ಪೂರ್ಣ ಆಯವ್ಯಯದ ನಂತರ ಪ್ರಸ್ತಾವನೆ ಸಲ್ಲಿಸುವಂತೆ ಹಣಕಾಸು ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಹಣಕಾಸು ವರ್ಷದಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಿಜ್ಞಾನ ಮತ್ತು ವಾಣಿಜ್ಯ ಕೋರ್ಸ್‌ಗಳನ್ನು ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
೨೦೧೭-೧೮ನೇ ಸಾಲಿನ ಆಯವ್ಯಯದಲ್ಲಿ ೩೦ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ವಿಜ್ಞಾನ ಮತ್ತು ಗಣಿತ ವಿಷಯಗಳೊಂದಿಗೆ ಪದವಿ ಪೂರ್ವ ತರಗತಿಗಳಿಗೆ ಉನ್ನತೀಕರಿಸಿ ಪ್ರಾರಂಭಿಸಲು ಆದೇಶ ಹೊರಡಿಸಲಾಗಿದೆ. ೧೦ ಉನ್ನತೀಕರಿಸಿದ ವಸತಿ ಶಾಲೆಗಳಿಗೆ ಪ್ರತಿ ಶಾಲೆಗೆ ೯ ಬೋಧಕ-ಬೋಧಕೇತರ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ ಎಂದರು.
ಇನ್ನುಳಿದ ೨೦ ಉನ್ನತೀಕರಿಸಿದ ವಸತಿ ಶಾಲೆಗಳಿಗೆ ಹುದ್ದೆಗಳನ್ನು ಮಂಜೂರು ಮಾಡುವ ಪ್ರಸ್ತಾವನೆ ಆರ್ಥಿಕ ಇಲಾಖೆಯ ಪರಿಶೀಲನೆಯಲ್ಲಿದೆ ಎಂದು ಹೇಳಿದರು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸಂಘಗಳ ವ್ಯಾಪ್ತಿಯಲ್ಲಿ ಖಾಯಂ ಆಗಿ ನೇಮಕಗೊಂಡ ಬೋಧಕ ಮತ್ತು ಬೋಧಕೇತರ ಹುದ್ದೆಗಳು ೧೦ ವರ್ಷ ಪೂರೈಸಿದ್ದಲ್ಲಿ ನಿಗದಿಪಡಿಸಿದ ಇಲಾಖಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಮತ್ತು ಯಾವುದೇ ಇಲಾಖಾ ವಿಚಾರಣೆ ಇಲ್ಲದ ಅಭ್ಯರ್ಥಿಗಳಿಗೆ ಕಾಲಮಿತಿ ವೇತನ ಬಡ್ತಿ ನೀಡಲಾಗುತ್ತಿದೆ ಎಂದರು.