ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಹೆಗಡೆ ನಿಧನ

ಬೆಂಗಳೂರು, ಏ.೧೮- ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷ, ಹಿರಿಯ ವಿದ್ವಾಂಸ ಪ್ರೊಫೆಸರ್ ಎಂ.ಎ.ಹೆಗಡೆ(೭೩) ಅವರು ಭಾನುವಾರ ಬೆಳಗ್ಗೆ ನಿಧನರಾದರು.
ಇದೇ ತಿಂಗಳ ೧೩ರಂದು ಪ್ರೊ.ಹೆಗಡೆ ಅವರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿತ್ತು. ಇಂದು ಮುಂಜಾನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಅಕಾಡೆಮಿಯ ಅಧ್ಯಕ್ಷರಾಗಿ ಎಂ.ಎ.ಹೆಗಡೆ ಅವರು ಕಲೆ, ಕಲಾವಿದರ ಉನ್ನತಿಗಾಗಿ ಸಾಕಷ್ಟು ಶ್ರಮಿಸಿದ್ದರು. ಅವರು ರೂಪಿಸಿದ್ದ ಮಾತಿನ ಮಂಟಪ ಕಾರ್ಯಕ್ರಮ ಅತ್ಯಂತ ಜನಪ್ರಿಯವಾಗಿತ್ತು.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರಾದ ಪ್ರೊ.ಎಂ.ಎ.ಹೆಗಡೆ ಪ್ರಸಕ್ತ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನೆಲೆಸಿದ್ದರು. ಹುಬ್ಬಳ್ಳಿಯ ಕಾಡಸಿದ್ದೇಶ್ವರ ಆರ್ಟ್ಸ್ ಕಾಲೇಜು ಮತ್ತು ಪಿಸಿ ಜಬಿನ್ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿದ್ದ ಎಂ.ಎ.ಹೆಗಡೆ, ಸಂಸ್ಕೃತದಲ್ಲೂ ಅಪಾರ ಪಾಂಡಿತ್ಯ ಹೊಂದಿದ್ದರು.
ಸಂಸ್ಕೃತ ಉಪನ್ಯಾಸಕರಾಗಿಯೂ ಸಹ ಸೇವೆ ಸಲ್ಲಿಸಿದ್ದ ಅವರು ಯಕ್ಷಗಾನದ ಬಗ್ಗೆ ವಿಶೇಷ ಒಲವು ಹೊಂದಿದ್ದರು. ಸ್ವತಹ ಪಾತ್ರಧಾರಿಯು ಆಗಿದ್ದ ಎಂ.ಎ.ಹೆಗಡೆ, ೧೫ಕ್ಕೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದಾರೆ. ಸೀತ ವಿಯೋಗ, ತ್ರಿಶಂಕು ಚರಿತೆ, ರಾಜಾ ಕಂದಾಮ ಮುಂತಾದವು ಅವರ ಜನಪ್ರಿಯ ಪ್ರಸಂಗಗಳಾಗಿವೆ. ಅಲಂಕಾರ ತತ್ವ, ಭಾರತೀಯ ತತ್ವಶಾಸ್ತ್ರ ಪರಿಚಯ, ಬ್ರಹ್ಮಸೂತ್ರ ಚತು; ಸೂತ್ರಿ, ಮತ್ತು ಸಿದ್ಧಾಂತ ಬಿಂದು ಮುಂತಾದ ಗ್ರಂಥಗಳನ್ನು ಅವರು ರಚಿಸಿದ್ದಾರೆ.
ಅತ್ಯಂತ ಪ್ರಖರ ಚಿಂತನೆಯ ವಿದ್ವಾಂಸರಾಗಿದ್ದ ಎಂ.ಎ.ಹೆಗಡೆ ತಮ್ಮ ಚಿಂತನೆಯನ್ನು ನಿಷ್ಠುರವಾಗಿ ಪ್ರತಿಪಾದಿಸುತ್ತಿದ್ದರು.ಇನ್ನು, ಮೃತರು ಪತ್ನಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಸಂತಾಪ: ಪ್ರೊಫೆಸರ್ ಎಂ.ಎ.ಹೆಗಡೆ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಗಣ್ಯರು
ತೀವ್ರ ಸಂತಾಪ ಸೂಚಿಸಿದ್ದಾರೆ. ಈ ನಾಡು ಕಂಡ ಶ್ರೇಷ್ಠ ವಿದ್ವಾಂಸರಲ್ಲಿ ಒಬ್ಬರಾಗಿದ್ದ ಎಂ.ಎ.ಹೆಗಡೆ ಅವರ ಅಕಾಲಿಕ ನಿಧನದಿಂದ ನಿಜಕ್ಕೂ ಸಾಂಸ್ಕೃತಿಕ ಲೋಕ ಒಂದು ದಿಗ್ಗಜ ವ್ಯಕ್ತಿತ್ವವನ್ನು ಕಳೆದುಕೊಂಡಂತಾಗಿದೆ ಎಂದವರು ಕಂಬನಿ ಮಿಡಿದಿದ್ದಾರೆ.