ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ಬೆಂಗಳೂರು, ಜ.8-ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ನ್ಯಾಯಾಲಯ ಯಡಿಯೂರಪ್ಪ ಅವರಿಗೆ ಛೀಮಾರಿ ಹಾಕಿದ್ದು,ಅವರು ಕೂಡಲೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ನಗರದಲ್ಲಿಂದು ಕೆಪಿಸಿಸಿ ವತಿಯಿಂದ ನಡೆದ ಬೆಂಗಳೂರು ವಿಭಾಗ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಸ್ಥಳೀಯ ಮುಖಂಡರ ಜತೆ ಸಮಾಲೋಚನೆ ಮತ್ತು ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು.

ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಯಡಿಯೂರಪ್ಪ ಅವರಿಗೆ ಛೀಮಾರಿ ಹಾಕಿ 25 ಸಾವಿರ ದಂಡ ವಿಧಿಸಿದೆ. ಅವರಿಗೆ ಮರ್ಯಾದೆ ಇದ್ದರೆ ಕೂಡಲೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಂಥ ಲಜ್ಜೆಗೆಟ್ಟ ಸರ್ಕಾರ ರಾಜ್ಯದ ಇತಿಹಾಸದಲ್ಲಿ ಎಂದೂ ಬಂದಿರಲಿಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪ ಅವರು ಸಿಎಂ ಆದ ಬಳಿಕ ಯಾವುದೇ ಹೊಸ ಕಾರ್ಯಕ್ರಮ ಘೋಷಣೆ ಮಾಡಿಲ್ಲ. ಕಳೆದ ಒಂದೂವರೆ ವರ್ಷದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿರುವುದನ್ನು ಹೊರತುಪಡಿಸಿದರೆ ಯಾವುದೇ ಸಾಧನೆ ಮಾಡಿಲ್ಲ ಎಂದು ಆರೋಪಿಸಿದರು.

ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಏನು. ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟಕೊಂಡು ಆಡಳಿತ ನಡೆಸುವುದನ್ನು ಬಿಟ್ಟರೆ ಯಾವುದೇ ಸಮಸ್ಯೆಗಳಿಗೆ‌ ಮೋದಿಯವರ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ ಎಂದ ಅವರು, ಇದು ನಾವು ಸುಮ್ಮನೆ ಕೂರುವ ಕಾಲವಲ್ಲ. ಹೋರಾಟ, ಸಂಘಟನೆ ನಮ್ಮ ಗುರಿಯಾಗಬೇಕು. ನಾವು ಹೋರಾಟ ಮಾಡಬೇಕಿರುವುದು ಕೋಮುವಾದದ ವಿರುದ್ಧ. ನಮ್ಮ ಸಾಂಪ್ರದಾಯಿಕ ಮತಗಳು ವಿಭಜನೆ ಆಗಿದೆ. ಅದನ್ನು ವಾಪಸ್ ತರುವ ಪ್ರಯತ್ನ ಆಗಬೇಕು ಎಂದರು.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಕೆ. ರೆಹಮಾನ್ ಖಾನ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಚಲುವರಾಯಸ್ವಾಮಿ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಸೇರಿದಂತೆ ಪ್ರಮುಖರಿದ್ದರು.