ಯತೀಂದ್ರ ಅಭಿಪ್ರಾಯ ವೈಯಕ್ತಿಕ

ಬೆಂಗಳೂರು, ಜ. ೧೭- ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂಬ ಸಿದ್ದರಾಮಯ್ಯ ಪುತ್ರ ಯತೀಂದ್ರರವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕೆಲವರು ತಮ್ಮ ವೈಯುಕ್ತಿಕ ಅಭಿಪ್ರಾಯಗಳನ್ನು ಹೇಳುತ್ತಾರೆ, ಅದಕ್ಕೆಲ್ಲಾ ಉತ್ತರಿಸಲ್ಲ ಎಂದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ಹಾಗೂ ಮೂವರು ಡಿಸಿಎಂಗಳ ಬಗ್ಗೆ ಹೈಕಮಾಂಡ್ ತನ್ನ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಿದೆ. ಹೀಗಿದ್ದರೂ ಕೆಲವರು ತಮ್ಮ ವೈಯುಕ್ತಿಕ ಅಭಿಪ್ರಾಯ ಹೇಳುತ್ತಾರೆ. ಅದಕ್ಕೆಲ್ಲಾ ನಾವು ಪ್ರತಿಕ್ರಿಯಿಸಲ್ಲ. ಆ ಹೇಳಿಕೆಗಳು ಪಕ್ಷಕ್ಕೆ ಸಂಬಂಧಪಟ್ಟಿದ್ದಲ್ಲ ಎಂದರು.
ದೆಹಲಿ ಮಟ್ಟದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಯಾವೆಲ್ಲಾ ಚರ್ಚೆ, ತೀರ್ಮಾನಗಳಾಗಿವೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಹೀಗಿರುವಾಗ ಈ ರೀತಿ ಹೇಳಿಕೆಗಳಿಗೆಲ್ಲಾ ಉತ್ತರ ಕೊಡುವುದು ಸರಿ ಬರಲ್ಲ ಎಂದರು.
ಇತ್ತೀಚೆಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರು ರಾಜ್ಯದ ಸಚಿವರುಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ಸಿದ್ದತೆ ಬಗ್ಗೆ ಮಾತ್ರ ಚರ್ಚೆಗಳಾದವು. ಉಳಿದಂತೆ ಉಪಮುಖ್ಯಮಂತ್ರಿ ಅಥವಾ ಬೇರೆ ಯಾವುದೇ ವಿಷಯಗಳ ಬಗ್ಗೆ ಚರ್ಚೆಗಳಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.