ಯತ್ನಾಳ್‌ಗೆ ನೋಟೀಸ್ ನೀಡಲು ಬಿಜೆಪಿ ತೀರ್ಮಾನ

ಬೆಂಗಳೂರು, ಜ. ೩- ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಬಹಿರಂಗ ಹೇಳಿಕೆ ನೀಡುತ್ತಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ಜಾರಿಗೊಳಿಸಲು ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇದೇ ವೇಳೆ ಪಕ್ಷಕ್ಕೆ ಮುಜುಗರ ಉಂಟುಮಾಡುವ ಹೇಳಿಕೆಗಳನ್ನು ನೀಡಬಾರದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರಿಗೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅರುಣ್‌ಸಿಂಗ್ ನೇತೃತ್ವದಲ್ಲಿ ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪದೇ ಪದೇ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಹಾಗೂ ನಾಯಕರಿಗೆ ಇರುಸು-ಮುರುಸು ತಂದಿರುವ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆದವು.
ಶಾಸಕ ಯತ್ನಾಳ್ ಅವರಿಗೆ ನೋಟಿಸ್ ಜಾರಿ ಮಾಡಿ ಅವರನ್ನು ಕರೆದು ಮಾತನಾಡಿ ಎಂದು ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರಿಗೆ ಸೂಚಿಸಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖ ಮುಖಂಡರು ಯತ್ನಾಳ್ ಅವರಿಗೆ ಈ ಹಿಂದೆಯೇ ನೋಟಿಸ್ ನೀಡಿದ್ದರೂ ಅವರು ಸುಮ್ಮನಾಗಿಲ್ಲ. ಅವರ ವಿರುದ್ಧ ಶಿಸ್ತುಕ್ರಮ ಆಗಬೇಕು. ಅವರ ಹೇಳಿಕೆಗಳು ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರ ತರುತ್ತಿವೆ ಎಂಬುದನ್ನು ಸಭೆಯಲ್ಲಿ ಪ್ರಸ್ತಾಪಿಸಿದ್ದರು.
ಎಲ್ಲವನ್ನು ಸಾವಧಾನದಿಂದ ಆಲಿಸಿದ ಅರುಣ್‌ಸಿಂಗ್, ಯತ್ನಾಳ್ ಅವರಿಗೆ ನೋಟೀಸ್ ಜಾರಿ ಮಾಡುವಂತೆ ಸೂಚನೆ ನೀಡಿದರು.
ಬೆಂಗಳೂರಿನಲ್ಲೂ ನಿನ್ನೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಲವು ಸಚಿವರು, ಯತ್ನಾಳ್ ಅವರ ವರ್ತನೆ ಬಗ್ಗೆ ಅರುಣ್‌ಸಿಂಗ್ ಅವರಿಗೆ ಮೌಖಿಕ ದೂರು ಸಲ್ಲಿಸಿದ್ದರು.
ಯಾರೂ ಬಹಿರಂಗವಾಗಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತಾಗಲಿ, ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತಾಗಲಿ ಮಾತನಾಡುವುದು ಬೇಡ. ಎಲ್ಲವೂ ಪಕ್ಷದ ಚೌಕಟ್ಟಿನಲ್ಲೇ ನಡೆಯಬೇಕು. ಹಾಗಾಗಿ ಯತ್ನಾಳ್ ಅವರನ್ನು ಕರೆದು ಮಾತನಾಡಿ, ನೋಟೀಸ್ ಅನ್ನು ಜಾರಿಮಾಡಿ ಎಂದು ಅರುಣ್‌ಸಿಂಗ್ ಹೇಳಿದ್ದಾರೆ.
ಈ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಡಿ.ವಿ. ಸದಾನಂದಗೌಡ, ಪ್ರಹ್ಲಾದ್ ಜೋಷಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಪಕ್ಷದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಮತ್ತಿತರರು ಉಪಸ್ಥಿತರಿದ್ದರು.