ಯಧುವೀರ್ ಗೆಲುವು ನಿಶ್ಚಿತ: ನಾಗೇಂದ್ರ ವಿಶ್ವಾಸ

ಸಂಜೆವಾಣಿ ನ್ಯೂಸ್
ಮೈಸೂರು.ಏ.28:- ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಹುಮತದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಎರಡೂ ಜಿಲ್ಲೆಗಳ ಜನರು ಸ್ವಯಂ ಪ್ರೇರಣೆ ಹಾಗೂ ಉತ್ಸಾಹದಿಂದ ಮತ ಚಲಾಯಿಸಿದ್ದಾರೆ. ಅಲ್ಲದೆ ಎಲ್ಲರ ಬಾಯಲ್ಲೂ ಯದುವೀರ್ ಅವರ ಹೆಸರು ಕೇಳಿ ಬರುತ್ತಿದೆ. ಇದನ್ನು ಗಮನಿಸಿದರೆ ಬಿಜೆಪಿ ಗೆಲುವು ಸಾಧಿಸುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು.
ಪಕ್ಷದ ಕಾರ್ಯಕರ್ತರು ಹಾಗೂ ಮುಖಮಡರು ಅಭ್ಯರ್ಥಿ ಗೆಲುವಿಗೆ ಹಗಲಿರುಳು ಶ್ರಮಿಸಿದ್ದಾರೆ. ಜತೆಗೆ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಇದಕ್ಕೆ ಸಾಥ್ ನೀಡಿರುವುದು ಮತ್ತಷ್ಟು ಬಲ ಬಂದಂತಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮ ವಹಿಸಿದ್ದು, ಪೂರಕವಾದ ವಾತಾವರಣ ನಿರ್ಮಾಣವಾಗಲು ಸಾಧ್ಯವಾಯಿತು. ಇದರಿಂದ ದೊಟ್ಟ ಮಟ್ಟದ ಗೆಲುವಿಗೆ ಸಹಕಾರಿಯಾಯಿತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಭ್ಯರ್ಥಿ ಯದುವೀರ್ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಇಡೀ ಕ್ಷೇತ್ರವನ್ನು ಸುತ್ತಿದ್ದಾರೆ. ಅಲ್ಲದೆ, ಸಾರ್ವಜನಿಕರೊಂದಿಗೆ ಅವರು ಬೆರೆಯುತ್ತಿದ್ದ ರೀತಿ ಎಲ್ಲರನ್ನೂ ಆಶ್ಚರ್ಯ ಚಕಿತರನ್ನಾಗಿಸಿದೆ. ರಾಜಮನೆತನದವರು ಕೈಗೆ ಸಿಗುವುದಿಲ್ಲ ಎಂಬ ವಿರೋಧ ಪಕ್ಷದವರ ಹೇಳಿಕೆಯನ್ನು ಯದುವೀರ್ ಸುಳ್ಳಾಗಿಸಿದ್ದು, ಸಾಮಾನ್ಯರಲ್ಲಿ ಸಾಮಾನ್ಯರಾಗಿ ಜನರೊಂದಿಗೆ ಮತ ಕೇಳಿದ್ದು, ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಅಭಿಪ್ರಾಯ ಪಟ್ಟರು.