
ಬೆಂಗಳೂರು,ಮಾ.೪:ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚ ಸ್ವೀಕಾರ ಪ್ರಕರಣ ಕುರಿತಂತೆ ತನಿಖೆ ನಡೆಯುತ್ತಿದ್ದು, ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ಸೂಕ್ಷ್ಮವಾಗಿ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿಗಳೇ ಸ್ಪಷ್ಟವಾಗಿ ಹೇಳಿದ್ದಾರೆ. ಈ ಕುರಿತು ಕಾನೂನು ಚೌಕಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಲಂಚ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ. ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉತ್ತರಿಸಿದರು.