
ಕಲಬುರಗಿ,ಅ.7-ಜೇವರ್ಗಿ ತಾಲ್ಲೂಕಿನ ಯಾಳವಾರ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ತಕ್ಷಣವೇ ಪಿಡಿಒ ನೇಮಕ ಮಾಡಿ ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಮುಂದೆ ಇಂದು ಜನಾಗ್ರಹ ಚಳವಳಿ ನಡೆಸಲಾಯಿತು.
ನಂತರ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.
ಯಾಳವಾರ ಗ್ರಾಪಂ ವ್ಯಾಪ್ತಿಯಲ್ಲಿ ಅವಶ್ಯವಿರುವ ಎಲ್ಲರಿಗೂ ನಿವೇಶನ ಮತ್ತು ಮನೆ ನಿರ್ಮಿಸಿಕೊಡಬೇಕು, ಕುಡಿಯುವ ನೀರು ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯ ಕಲ್ಪಿಸಬೇಕು, ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕ್ರಿಯಾ ಯೋಜನೆ ರೂಪಿಸಿ ಅದನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಮನವಿಪತ್ರದಲ್ಲಿ ಆಗ್ರಹಿಸಲಾಗಿದೆ.
ಪಕ್ಷದ ಜಿಲ್ಲಾ ಕಾರ್ಯದರ್ಶಿ ಡಾ.ಮಹೇಶಕುಮಾರ ರಾಠೋಡ್, ಜೇವರ್ಗಿ ತಾಲ್ಲೂಕ ಕಾರ್ಯದರ್ಶಿ ಮಲ್ಲಿಕಾರ್ಜುನ ದೊಡ್ಡಮನಿ, ಇಬ್ರಾಹಿಂ ಪಟೇಲ್ ಯಾಳವಾರ, ಶರಣು ದೊಡ್ಡಮನಿ, ಗುಂಡಪ್ಪ ಹೊಸಮನಿ, ಹಣಮಂತ ಅಟ್ಟೂರ ಸೇರಿದಂತೆ ಮತ್ತಿತರರು ಚಳವಳಿಯಲ್ಲಿ ಭಾಗವಹಿಸಿದ್ದರು.