ಯುವಕರಿಗೆ ಮಾದಕ ವಸ್ತುಗಳ ಜಾಗೃತಿ ಅಗತ್ಯ

ಬೆಂಗಳೂರು, ಮಾ.೧೦-ಯುವ ಜನಾಂಗ ಮಾದಕ ವಸ್ತುಗಳ ವ್ಯಸನಿಗಳಾಗದಂತೆ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿಂದು ಕರ್ನಾಟಕ ರಾಜ್ಯ ಪೊಲೀಸ್ ಹಾಗೂಭಾರತೀಯ ಸ್ಟೇಟ್‌ಬ್ಯಾಂಕ್ ಸಹಯೋಗದಲ್ಲಿಯೇ ಆಯೋಜಿಸಲಾಗಿದ್ದ ಪೊಲೀಸ್ ರನ್‌ಗೆ ವಿಧಾನಸೌಧದ ಮುಂಭಾಗ ಚಾಲನೆ ನೀಡಿ ಮಾತನಾಡಿದ ಅವರು, ಯುವ ಜನಾಂಗ ದೇಶದ ಸಂಪತ್ತು, ಯುವಕರು ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಯುವಕರು ಮಾದಕ ವಸ್ತುಗಳ ವ್ಯಸನಿಗಳಾಗದಂತೆ ಜಾಗೃತಿ ಮೂಡಿಸಬೇಕಿದೆ ಎಂದರು.
ಯುವಕರನ್ನು ಮಾದಕ ವಸ್ತುಗಳ ದುಶ್ಚಟದಿಂದ ದೂರವಿರಲು ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದ್ದು, ಇದಕ್ಕೆ ಸಾರ್ವಜನಿಕರು ಕೈ ಜೋಡಿಸಿ ಕರ್ನಾಟಕ ಮತ್ತು ಬೆಂಗಳೂರನ್ನು ಮಾದಕ ವಸ್ತು ಮುಕ್ತವನ್ನಾಗಿಸಲು ಸಹಕಾರ ನೀಡಬೇಕು ಎಂದು ಹೇಳಿದರು.
ದೇಶದಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಜಾಗೃತಿ ಅವಶ್ಯವಿದೆ. ಸೈಬರ್ ಅಪರಾಧಗಳನ್ನು ಮಾಡಬಾರದು ಎಂಬ ಮನೋಭಾವವನ್ನು ಎಲ್ಲರಲ್ಲೂ ಬೆಳೆಸಬೇಕಿದೆ ಎಂದರು.
ಬೆಂಗಳೂರಿನಲ್ಲಿ ಹಸಿರು ಕಡಿಮೆಯಾಗುತ್ತಿದೆ. ಬೆಂಗಳೂರನ್ನು ಪುನಃ ಹಸಿರು ನಗರವನ್ನಾಗಿಸುವುದು ಹಾಗೂ ಯುವ ಜನಾಂಗವನ್ನು ಆರೋಗ್ಯ
ವಂತರನ್ನಾಗಿಸುವ ಉದ್ದೇಶದಿಂದ ಪೊಲೀಸ್ ಓಟ ಆಯೋಜಿಸಿ ಜಾಗೃತಿ
ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ.
ಗೋವಿಂದರಾಜು, ನಸೀರ್‌ಅಹ್ಮದ್, ಮುಖ್ಯಮಂತ್ರಿಗಳ ಅಪರಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಪೊಲೀಸ್ ಮಹಾ ನಿರ್ದೇಶಕ ಅಲೋಕ್‌ಮೋಹನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.