
ಸಿರವಾರ ಆ೨೮: ಶಾಂತಿ ಸಂಯಮದ ಚಟುವಟಿಕೆಗಳಾದ ಮಾನವೀಯ ತತ್ವ ಮತ್ತು ಮೌಲ್ಯಗಳನ್ನು ಬೆಳೆಸುವುದು ರೆಡ್ ಕ್ರಾಸ್ ಉದ್ಧೇಶವಾಗಿದೆ ಎಂದು ಯುವ ರೆಡ್ ಕ್ರಾಸ್ ಸಮಿತಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಂಚಾಲಕ ವಿದ್ಯಾಸಾಗರ ಚಿಣಮಗೇರಿ ಅವರು ಹೇಳಿದರು.
ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಯುವ ರೆಡ್ ಕ್ರಾಸ್ ಕುರಿತು ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜನರ ಆರೋಗ್ಯ ವೃದ್ಧಿಸುವ ಕಾರ್ಯ ನಿರ್ವಹಿಸುವುದು, ಪ್ರಾಕೃತಿಕ ವಿಕೋಪಗಳ ಸಮಯದಲ್ಲಿ ಮಾನವೀಯ ನೆರವು ನೀಡುವುದು, ಆರೋಗ್ಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು ಮತ್ತು ಸಮಾಜದ ಸ್ಥಾನವನ್ನು ಹೆಚ್ಚಿಸುವ ಕಾರ್ಯ ಚಟುವಟಿಕೆಗಳಿಗೆ ಒತ್ತು ನೀಡುವುದಾಗಿದೆ ಎಂದರು.
ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿ ವೃಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಈ ವೇಳೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ಹಾಗೂ ರಾಯಚೂರು ವಿಶ್ವವಿದ್ಯಾಲಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯ ಪಾಂಡು, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಅತಾವುಲ್ಲಾ, ಸಂಚಾಲಕಿ ತಹಿನಿಯತ್ ಜಹಾ, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿನಯಶಂಕರ, ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿಗಳು ಹಾಗೂ ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳಿದ್ದರು.