ಬೀದರ್:ಜೂ.20: ಕೇಂದ್ರದ ಬಿಜೆಪಿ ಸರ್ಕಾರವು ಯುವ ಸಬಲೀಕರಣಕ್ಕೆ ಒತ್ತು ನೀಡಿದೆ ಎಂದು ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.
ಇಲ್ಲಿಯ ಬಿ.ವಿ. ಭೂಮರಡ್ಡಿ ಕಾಲೇಜಿನಲ್ಲಿ ನೆಹರೂ ಯುವ ಕೇಂದ್ರ, ಶ್ರೀ ಜಗದ್ಗುರು ಪಂಚಾಚಾರ್ಯ ಯುವಕ ಸಂಘ, ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆ, ಬಿ.ವಿ. ಭೂಮರಡ್ಡಿ ಕಾಲೇಜು ಹಾಗೂ ಜಿಲ್ಲೆಯ ಆಯ್ದ ಯುವ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಯುವ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವುದಕ್ಕಾಗಿ ಯುವ ಜನರಿಗೆ ವಿವಿಧ ಕೌಶಲ ತರಬೇತಿಗಳನ್ನು ಕೊಡಲಾಗುತ್ತಿದೆ. ಯುವ ಉತ್ಸವ, ಯುವ ಸಂಸತ್ತು, ಅಂತರರಾಷ್ಟ್ರೀಯ ವಿನಿಮಯ ಕಾರ್ಯಕ್ರಮಗಳ ಮೂಲಕ ಯುವ ನಾಯಕತ್ವ ಬೆಳವಣಿಗೆಗೆ ಪ್ರೋತ್ಸಾಹಿಸಲಾಗುತ್ತಿದೆ ಎಂದು ತಿಳಿಸಿದರು.
ಬ್ರಿಟಿಷರ ಕಾಲದ ಮೆಕಾಲೆ ಶಿಕ್ಷಣ ಪದ್ಧತಿ ದೇಶದ ಸಂಸ್ಕøತಿ ಮೇಲೆ ದುಷ್ಪರಿಣಾಮ ಬೀರಿದೆ. ಹಿಂದಿನ ಸರ್ಕಾರ ಇದನ್ನು ಬದಲಿಸಬಹುದಿತ್ತಾದರೂ, ಆ ಕೆಲಸ ಮಾಡಲಿಲ್ಲ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದೆ. ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹೊಣೆಗಾರಿಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮೇಲಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂಖಾನ್ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಜಿಲ್ಲೆಯಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಯುವ ಉತ್ಸವ ಆಯೋಜನೆಗೆ ಪ್ರಯತ್ನಿಸೋಣ ಎಂದರು.
ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಕಾರ್ಯಕ್ರಮಗಳು ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಅಂಥ ಕಾರ್ಯಕ್ರಮಗಳಿಗೆ ತಮ್ಮ ಸಹಕಾರ ಇರಲಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿ, ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆಯು ಯುವಜನರ ಏಳಿಗೆಗಾಗಿ ಎರಡು ದಶಕಗಳಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದೆ ಎಂದು ಹೇಳಿದರು.
ಜಿಲ್ಲೆಯ ಯುವಕರು ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಯುವ ಉತ್ಸವಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ಸಲಹೆ ಮಾಡಿದರು.
ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ, ಎಚ್.ಕೆ.ಇ. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ, ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ, ಬಿ.ವಿ. ಭೂಮರಡ್ಡಿ ಕಾಲೇಜು ಪ್ರಾಚಾರ್ಯ ಡಾ. ಪಿ. ವಿಠ್ಠಲರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಲಮಾಣಿ, ನಗರಸಭೆ ಆಯುಕ್ತ ಶಿವರಾಜ ರಾಠೋಡ್ ಇದ್ದರು.
ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ ಸ್ವಾಗತಿಸಿದರು. ಪ್ರೊ. ರೇಣುಕಾ ಮಳ್ಳಿ ನಿರೂಪಿಸಿದರು.
ಉತ್ಸವದಲ್ಲಿ ಯುವ ಜನರಿಗಾಗಿ ಚಿತ್ರಕಲೆ, ಭಾಷಣ, ಕವನ, ಮೊಬೈಲ್ ಫೊಟೊಗ್ರಫಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಯುವ ಉತ್ಸವಕ್ಕೆ ರೂ. 1 ಲಕ್ಷ ದೇಣಿಗೆಗೆ ಸಿದ್ಧ
ಬೀದರ್: ಬೀದರ್‍ನಲ್ಲಿ ರಾಜ್ಯ ಅಥವಾ ರಾಷ್ಟ್ರಮಟ್ಟದ ಯುವ ಉತ್ಸವ ಆಯೋಜಿಸಿದರೆ ರೂ. 1 ಲಕ್ಷ ದೇಣಿಗೆ ಕೊಡಲು ಸಿದ್ಧ ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಹೇಳಿದರು.
ಯುವ ಉತ್ಸವಗಳು ಯುವಕರನ್ನು ಸಾಧನೆಗೆ ಪ್ರೇರೇಪಿಸುತ್ತೇವೆ. ಬೀದರ್‍ನಲ್ಲಿ ಬರುವ ದಿನಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಯುವ ಉತ್ಸವ ನಡೆಯುವಂತಾಗಬೇಕು ಎಂದರು.