ಧಾರವಾಡ, ಮಾ.23: ಸರ್ಕಾರದ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಸರಿಯಾದ ಫಲಾನುಭವಿಗಳ ಆಯ್ಕೆ ಮೂಲಕ ಯೋಜನೆಗಳನ್ನು ಅವರ ಮನೆ ಬಾಗಲಿಗೆ ತಲುಪಿಸುವ ಕೆಲಸ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ 2022-23ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಫೆಬ್ರವರಿ 2023ರ ಅಂತ್ಯದವರೆಗೆ ಸಾಧಿಸಿದ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ ಕಾರ್ಯಕ್ರಮಗಳ ಪ್ರಗತಿಯ ವಿವರ ಮತ್ತು ಸಂಪೂರ್ಣ ಮಾಹಿತಿಯನ್ನು ಖುದ್ದು ಹಾಜರಾಗಿ ನೀಡದೆ ಇರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಅವರು, ಬರುವ ಗುರುವಾರ ಮಧ್ಯಾಹ್ನದೊಳಗೆ ಸಮರ್ಪಕ ಮಾಹಿತಿ ಮತ್ತು ಪ್ರಗತಿ ವರದಿಯನ್ನು ಸಲ್ಲಿಸದಿದ್ದಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಮತ್ತು ಈ ಸಭೆಗೆ ಇಲಾಖೆಯ ಮುಖ್ಯಸ್ಥರು ತಮ್ಮ ಕೆಳ ಹಂತದ ಅಧಿಕಾರಿಗಳನ್ನು ಕಳುಹಿಸದೆ ತಾವೇ ಖುದ್ದಾಗಿ ಬರಬೇಕು ಎಂದು ಅವರು ಆದೇಶಿಸಿದರು.
ಪ್ರತಿ ತಿಂಗಳು 5ನೇ ದಿನಾಂಕದೊಳಗೆ ಪ್ರಗತಿ ವರದಿ ಸಲ್ಲಿಸಬೇಕು. ನಂತರ ಸಲ್ಲಿಸಿದ ದಾಖಲೆಗಳನ್ನು ತೆಗೆದುಕೊಳ್ಳದೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಇದ್ದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಅಲ್ಲಾಬಕಾಷ ಎಂ.ಎಸ್. ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.