ರಂಗೇರಿದ ಬೆಳಗಾವಿ ಅಖಾಡ:ಶೆಟ್ಟರ್-ರಮೇಶ್ ಚರ್ಚೆ

(ಸಂಜೆವಾಣಿ ಪ್ರತಿನಿಧಿಯಿಂದ)
ಬೆಳಗಾವಿ,ಮಾ.೨೯:ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾದ ಬಳಿಕ ಚುನಾವಣಾ ಅಖಾಡ ರಂಗೇರಿದೆ. ಈ ಕ್ಷೇತ್ರದಲ್ಲಿ ಹಾಲಿ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಹಾಗೂ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್‌ಶೆಟ್ಟರ್ ಸ್ಪರ್ಧಿಸುತ್ತಿದ್ದಾರೆ. ಪುತ್ರನ ಗೆಲುವಿಗೆ ಲಕ್ಷ್ಮಿಹೆಬ್ಬಾಳ್ಕರ್ ಪ್ರಯತ್ನ ನಡೆಸಿದ ಬೆನ್ನಲ್ಲೆ ಜಿಲ್ಲೆಯ ಪ್ರಭಾವಿ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಬೆಳಗಾವಿ ಹಾಲಿ ಸಂಸದೆ ಮಂಗಳಾ ಅಂಗಡಿ ನಿವಾಸದಲ್ಲಿ ಉಭಯ ನಾಯಕರು ಭೇಟಿಯಾಗಿ ಚುನಾವಣೆ ಗೆಲ್ಲುವ ತಂತ್ರ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಸೋಮವಾರದಿಂದ ಬಿಜೆಪಿ ಅಭ್ಯರ್ಥಿ ಜಗದೀಶ್‌ಶೆಟ್ಟರ್ ಪರ ಪ್ರಚಾರ ನಡೆಸುವುದಾಗಿ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಪಣ ತೊಟ್ಟಿದ್ದು, ಈ ಮೂಲಕ ವಿಧಾನಸಭಾ ಚುನಾವಣೆಯ ಸೋಲಿನ ಸೇಡನ್ನು ತೀರಿಸಿಕೊಳ್ಳಬೇಕು ಎಂಬ ಲೆಕ್ಕಾಚಾರದಲ್ಲಿ ರಮೇಶ್ ತೊಡಗಿಕೊಂಡಿದ್ದಾರೆ. ಇದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಬೆನ್ನಿಗೆ ನಿಂತಿದ್ದಾರೆ. ಈಗಾಗಲೇ ಗೋಕಾಕ್ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದಾರೆ.