ರಕ್ಷಣಾ ವಲಯದಲ್ಲಿ ಸ್ವದೇಶಿ ಉತ್ಪನ್ನಗಳನ್ನು ಹೆಚ್ಚಳ

ಬೆಂಗಳೂರು,ನ೧೪:ಕರ್ನಾಟಕ ಸರ್ಕಾರ ಜಾರಿಗೊಳಿಸುತ್ತಿರುವ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ ೨೦೨೨-೨೦೨೭ ರಕ್ಷಣಾ ವಲಯದಲ್ಲಿ ಸ್ವದೇಶಿ ಉತ್ಪನ್ನಗಳನ್ನು ಹೆಚ್ಚಿಸಿ ಆತ್ಮನಿರ್ಭರತೆ ಸಾಧಿಸಲು ನೆರವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಬೆಂಗಳೂರಿನಲ್ಲಿ ಆರ್ಮಿ ಡಿಸೈನ್ ಬ್ಯೂರೋದ ರೀಜಿನಲ್ ಟೆಕ್ನಾಲಜಿ ನೋಡ್ (ಆರ್‌ಟಿಎನ್) ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ವೈಮಾನಿಕ ಕ್ಷೇತ್ರದಲ್ಲಿ ಭಾರತ ಬಹಳ ಪ್ರಗತಿ ಸಾಧಿಸಿದೆ. ಇತ್ತೀಚೆಗೆ ಕೊಚ್ಚಿಯಲ್ಲಿ ಸ್ವದೇಶಿ ನಿರ್ಮಿತ ಐಎನ್‌ಎಸ್ ವಿಕ್ರಾಂತ್ ಮೂಲಕ ರಕ್ಷಣಾ ಕ್ಷೇತ್ರದ ಸಾಮರ್ಥ್ಯ ಹೆಚ್ಚಾಗಿದೆ. ಕರ್ನಾಟಕವು ಎಲ್ಲಾ ಕ್ಷೇತ್ರಗಳಲ್ಲಿ ಹೂಡಿಕೆದಾರರ ಆದ್ಯತೆಯ ಕೇಂದ್ರವಾಗಿದೆ. ಬೆಂಗಳೂರಿನಲ್ಲಿ ಬಹಳ ಹಿಂದೆಯೇ ಎಚ್‌ಎಎಲ್ ಸಂಸ್ಥೆ ಆರಂಭವಾಗಿದ್ದರಿಂದ, ವಿಮಾನಯಾನ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿ ಸಾಧಿಸಿತು. ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ ತಂದ ಮೊದಲ ರಾಜ್ಯವೂ ಕರ್ನಾಟಕವೇ ಆಗಿದ್ದು, ವೈಮಾನಿಕ ಕ್ಷೇತ್ರದಲ್ಲಿ ಮುಂಚೂಣಿ ಸಾಧಿಸಿದೆ ಎಂದರು.
ದೇಶದ ಶೇ.೨೫ ರಷ್ಟು ವಿಮಾನ ಹಾಗೂ ಅಂತರಿಕ್ಷ ನೌಕೆಯ ತಯಾರಿಕಾ ಉದ್ಯಮಗಳು ಕರ್ನಾಟಕದಲ್ಲೇ ಇದ್ದು, ಈ ಕ್ಷೇತ್ರದಲ್ಲಿ ರಾಜ್ಯ ಪ್ರಾಬಲ್ಯ ಹೊಂದಿದೆ. ರಕ್ಷಣಾ ಕ್ಷೇತ್ರಕ್ಕೆ ಪೂರೈಕೆಯಾಗುವ ಹೆಲಿಕಾಪ್ಟರ್, ವಿಮಾನಗಳಲ್ಲಿ ಶೇ.೬೭ ರಷ್ಟು ರಾಜ್ಯದಲ್ಲೇ ತಯಾರಾಗುತ್ತಿವೆ. ರಾಜ್ಯ ಸರ್ಕಾರ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿಯನ್ನು ಜಾರಿ ಮಾಡಲಿದ್ದು, ಇದು ಹೊಸ ತಂತ್ರಜ್ಞಾನಗಳೊಂದಿಗೆ ಸ್ವದೇಶಿ ಉತ್ಪನ್ನಗಳ ತಯಾರಿಕೆಗೆ ಸಂಪೂರ್ಣ ಉತ್ತೇಜನ ನೀಡಲಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರ ಪರಿಕಲ್ಪನೆಯಡಿ ಮೇಕ್ ಇನ್ ಇಂಡಿಯಾ ಹಾಗೂ ಸ್ಕಿಲ್ ಇಂಡಿಯಾ ಯೋಜನೆ ನೀಡಿದ್ದಾರೆ. ಈಗ ಹೊಸ ?ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ ೨೦೨೨-೨೦೨೭ ಯಿಂದ ರಾಜ್ಯದಲ್ಲಿ ೪-೫ ವರ್ಷಗಳಲ್ಲಿ ೪೫-೫೦ ಸಾವಿರ ಕೋಟಿ ರೂ. ಹೂಡಿಕೆ ನಿರೀಕ್ಷಿಸಬಹುದು. ಇದರಿಂದ ಹೆಚ್ಚು ಉದ್ಯೋಗ ಸೃಷ್ಟಿಯ ಜೊತೆಗೆ, ಸಂಶೋಧನೆ ಮತ್ತು ಅಭಿವೃದ್ಧಿಯ ಬಲವರ್ಧನೆಯಾಗಲಿದೆ. ಹಾಗೆಯೇ, ಈ ನೀತಿಯಿಂದ ಉದ್ಯಮ ನಡೆಸುವ ಪ್ರಕ್ರಿಯೆಗಳು (ಈಸ್ ಆಫ್ ಡೂಯಿಂಗ್ ಬಿಸ್‌ನೆಸ್) ಸರಳವಾಗಲಿದೆ ಎಂದರು.
ಕೋವಿಡ್ ಸಾಂಕ್ರಾಮಿಕದ ನಂತರ ಆರ್ಥಿಕತೆಯ ಪ್ರಗತಿಗೆ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ರಾಜ್ಯ ಸರ್ಕಾರ ಆಯೋಜಿಸಿದ್ದು, ೯.೫ ಲಕ್ಷ ಕೋಟಿ ಹೂಡಿಕೆಗೆ ಒಪ್ಪಂದಗಳು ನಡೆದಿವೆ. ಹೂಡಿಕೆಯ ವಿಚಾರದಲ್ಲಿ ಈ ಮಟ್ಟಿಗೆ ಉದ್ಯಮಿಗಳ ವಿಶ್ವಾಸವನ್ನು ರಾಜ್ಯ ಗಳಿಸಿದೆ ಎಂದರು.