ರದ್ದೇವಾಡಗಿ, ಗುತ್ತೇದಾರ ತಿಳಿದು ಮಾತನಾಡಲಿ

ಕಲಬುರಗಿ,ಸೆ.24-ಇಲ್ಲಿನ ಕಡಗಂಚಿಯ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಘಟನೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆಯವರು ಯಾವುದೇ ರೀತಿಯ ಪ್ರಚೋದನಾಕಾರಿ ಹೇಳಿಕೆ ನೀಡಿಲ್ಲ. ಬದಲಾಗಿ ಸೌಹಾರ್ದತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಭುದ್ಧತೆಯಿಂದ ಮಾತನಾಡಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಗದೇವ ಗುತ್ತೇದಾರ ಕಾಳಗಿ ಹೇಳಿದ್ದಾರೆ.
ಸಚಿವ ಪ್ರಿಯಾಂಕ್ ಎಂ.ಖರ್ಗೆಯವರ ಕುರಿತು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರ್ಷಾನಂದ ಗುತ್ತೇದಾರ ನೀಡಿರುವ ಹೇಳಿಕೆಯನ್ನು ಜಗದೇವ ಗುತ್ತೇದಾರ ತೀವ್ರವಾಗಿ ಖಂಡಿಸಿದ್ದಾರೆ.
ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ಇರಲಿ ಎಂಬ ಸದುದ್ದೇಶದಿಂದ ಪ್ರಿಯಾಂಕ ಎಂ.ಖರ್ಗೆಯವರು ಹೇಳಿಕೆ ನೀಡಿದ್ದಾರೆ. ಅಲ್ಲದೇ ಸ್ವಾಮಿ ವಿವೇಕಾನಂದರ ಬಗ್ಗೆ ಅವರು ಯಾವುದೇ ಅವಹೇಳನಕಾರಿ ಮಾತನಾಡಿರುವದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಕೇಂದ್ರಿಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವ ಎಲ್ಲಾ ಹಕ್ಕು ಅಧಿಕಾರ ಇದೆ. ಇದನ್ನು ಬಿಜೆಪಿ ನಾಯಕರು ಅರಿತುಕೊಳ್ಳಬೇಕು. ಇದೆಲ್ಲಾ ಬಿಟ್ಟು ಪ್ರಚಾರಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಮಾತನಾಡುವದು ಸರಿಯಲ್ಲ. ಇನ್ನೂ ಮುಂದಾದರೂ ಬಿಜೆಪಿ ಜಿಲ್ಲಾ ಅಧ್ಯಕ್ಷ ಸ್ಥಾನದಲ್ಲಿರುವ ಶಿವರಾಜ ಪಾಟೀಲ ರದ್ದೇವಾಡಗಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಹರ್ಷಾನಂದ ಗುತ್ತೇದಾರ ಅವರ ಸರಿಯಾಗಿ ತಿಳಿದುಕೊಂಡು ಹೇಳಿಕೆ ನೀಡಲಿ ಎಂದಿದ್ದಾರೆ.