ರಮೇಶ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ತುಮಕೂರು, ಮಾ. ೨೯- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರ ಬಗ್ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರವರು ಅಶ್ಲೀಲ ಪದಗಳ ಪ್ರಯೋಗ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಟೌನ್‌ಹಾಲ್ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾಜಿ ಶಾಸಕ ಡಾ. ರಫೀಕ್ ಅಹ್ಮದ್ ಮಾತನಾಡಿ, ಈ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ತಪ್ಪು ಮಾಡಿರುವುದು ರಾಜ್ಯದ ಜನತೆಗೆ ಸ್ಪಷ್ಟವಾಗಿ ತಿಳಿದಿದೆ. ಆದರೂ ವಿನಾ ಕಾರಣ ಡಿ.ಕೆ. ಶಿವಕುಮಾರ್ ರವರ ಹೆಸರನ್ನು ಈ ಪ್ರಕರಣದಲ್ಲಿ ತಳಕು ಹಾಕುತ್ತಿರುವುದಲ್ಲದೆ, ಅವಾಚ್ಯ ಶಬ್ದ ಬಳಸಿರುವುದು ರಮೇಶ್ ಜಾರಕಿಹೊಳಿಯ ದುರಹಂಕಾರದ ಪರಮಾವಧಿ ಎಂದರೆ ತಪ್ಪಾಗಲಾರದು ಎಂದರು.
ಈ ರೀತಿ ವಿಚಲಿತರಾಗಿ ಅಸಹ್ಯ ಪದಗಳ ಬಳಕೆ ಮಾಡಿರುವುದರಿಂದ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ ಅವರು, ಈ ಸಿ.ಡಿ. ಪ್ರಕರಣದ ತನಿಖೆಯು ಹಾದಿ ತಪ್ಪುತ್ತಿದೆ. ಇದರ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸರ್ಕಾರವೇ ನೇರ ಕಾರಣವಾಗಿದೆ. ಇನ್ನಾದರೂ ಎಚ್ಚೆತ್ತು ಪಾರದರ್ಶಕವಾಗಿ ತನಿಖೆ ಮಾಡಲಿ ಎಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ರಾಮಕೃಷ್ಣ ಮಾತನಾಡಿ, ರಮೇಶ್ ಜಾರಕಿಹೊಳಿ ಕ್ಷಮೆಯಾಚನೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಆರ್.ನಾರಾಯಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸೈಯದ್ ಮಹಬೂಬ್ ಪಾಷ, ಜಿ.ರಾಜು, ಮಹಾನಗರ ಪಾಲಿಕೆ ಸದಸ್ಯರಾದ ಸೈಯದ್ ನಯಾಜ್, ಮಹೇಶ್‌ಕುಮಾರ್, ಷಕೀಲರಾದ ಅಹ್ಮದ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಸೈಯದ್ ಫೀರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಂಜಣ್ಣ, ಮುಖಂಡರಾದ ಜಯಮೂರ್ತಿ, ಜಾರ್ಜ್, ನಟರಾಜ್ ಶೆಟ್ಟಿ, ಜಿಯಾ,
ವೈ.ಎನ್. ನಾಗರಾಜು, ಶಾಬುದ್ದೀನ್, ಜಾಕೀರ್ ಪಾಷ, ಜಯಸಿಂಹ, ಗೀತಾ, ಸುಜಾತ, ಮುಜೀದಾ ಮತ್ತಿತರರು ಪಾಲ್ಗೊಂಡಿದ್ದರು.