
ದೇವದುರ್ಗ.ಜು.೨೮- ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ಗುಣಮಟ್ಟ ಕಾಯ್ದಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು.
ಪಟ್ಟಣದ ಮಿನಿವಿಧಾನಸೌಧ ಕಚೇರಿಯಲ್ಲಿ ಬುಧುವಾರ ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆಲ್ದರ್ತಿ, ಮೂಷ್ಠರು, ಗೆಜ್ಜೆಭಾವಿ, ಅರಕೇರಾ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ರಸ್ತೆಯನ್ನ ವೀಕ್ಷಣೆ ಮಾಡಿದರು. ಅರಕೇರಾ ತಾಲೂಕು ಘೋಷಣೆ ಹಿನ್ನೆಲೆಯಲ್ಲಿ ವಿವಿಧ ಸರಕಾರಿ ಕಚೇರಿಗಳ ಮಾಹಿತಿ ಕೇಳಿದ ಹಿನ್ನೆಲೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.
ಡಿಎಪಿ ರಸಗೊಬ್ಬರ ಕೊರತೆ ಗಮನಕ್ಕೆ ಬಂದಿದೆ. ರೈತರಿಗೆ ತೊಂದರೆ ಆಗದಂತೆ ಪೂರೈಕೆ ಮಾಡಲು ಕ್ರಮವಹಿಸಲಾಗುತ್ತದೆ ಎಂದು ಹೇಳಿದರು. ಕಂದಾಯ ಇಲಾಖೆ ವ್ಯಾಪ್ತಿಯ ಸಮಸ್ಯೆ ಕುರಿತು ಅಧಿಕಾರಿಗಳ ಸಭೆ ಮಾಡಲಾಗುತ್ತದೆ. ಸರಕಾರಿ ಆಸ್ಪತ್ರೆ, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು. ಮುಂಗಾರು ಹಂಗಾಮಿನಲ್ಲಿ ಯಾವುದೇ ರಸಗೊಬ್ಬರ ಸಮಸ್ಯೆ ಆಗದಂತೆ ಅಧಿಕಾರಿಗಳು ಎಚ್ಚರವಹಿಸಿ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.