ರಸ್ತೆ ದುರಸ್ತಿಗೆ ಆಗ್ರಹಿಸಿ ಕಾಂಗ್ರೆಸ್‍ನಿಂದ ಪ್ರತಿಭಟನೆ

ಹುಬ್ಬಳ್ಳಿ,ಜು21 : ನಿರಂತರ ಮಳೆಯಿಂದಾಗಿ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ಶೀಘ್ರವೇ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಗರದ ಗೋಪನಕೊಪ್ಪ ರಸ್ತೆಯ ಶಾಂತಿನಗರ ಕ್ರಾಸ್ ಬಳಿ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದರು.
ವಿನೂತನ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ರಸ್ತೆ ಗುಂಡಿಗಳಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಈ ಕ್ಷೇತ್ರದ ಜನಪ್ರತಿನಿಧಿಯಾದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಈ ರಸ್ತೆಯತ್ತ ಗಮನ ಹರಿಸದೇ ಇರುವುದನ್ನು ಖಂಡನೀಯವಾಗಿದೆ.
ರಸ್ತೆ ಅವ್ಯವಸ್ಥೆಯಿಂದಾಗಿ ಜನರು ಹಿಡಿಶಾಪ ಹಾಕುತ್ತಿದ್ದಾರೆಂದು ಬಿಜೆಪಿ ಸರ್ಕಾರ ಹಾಗೂ ಜಗದೀಶ್ ಶೆಟ್ಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ಹೂವಪ್ಪ ದಾಯಗೋಡಿ ಸೇರಿದಂತೆ ಉಪಸ್ಥಿತರಿದ್ದರು.